ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಅನುಷ್ಠಾನ, ಬರ ಪರಿಹಾರ ವಿತರಣೆ, ರೈತರ ಸಂಕಷ್ಟ ಹಾಗೂ ಪ್ರಾದೇಶಿಕ ಅಸಮಾನತೆ ನಿವಾರಣೆ ಕುರಿತು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕನಿಷ್ಠ ಐದು ದಿನಗಳ ಕಾಲ ಸಮಗ್ರ ಚರ್ಚೆ ನಡೆಯಬೇಕು. ಕೇವಲ ಅಧಿವೇಶನ ನಡೆಸಿ, ಈ ಭಾಗದ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು
ಕನ್ನಡಪ್ರಭ ವಾರ್ತೆ ಬೆಳಗಾವಿ
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಅನುಷ್ಠಾನ, ಬರ ಪರಿಹಾರ ವಿತರಣೆ, ರೈತರ ಸಂಕಷ್ಟ ಹಾಗೂ ಪ್ರಾದೇಶಿಕ ಅಸಮಾನತೆ ನಿವಾರಣೆ ಕುರಿತು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕನಿಷ್ಠ ಐದು ದಿನಗಳ ಕಾಲ ಸಮಗ್ರ ಚರ್ಚೆ ನಡೆಯಬೇಕು. ಕೇವಲ ಅಧಿವೇಶನ ನಡೆಸಿ, ಈ ಭಾಗದ ಸಮಸ್ಯೆಗಳನ್ನು ನಿರ್ಲಕ್ಷಿಸಿದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.2ರಿಂದ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುವುದು. ಒಂಬತ್ತು ದಿನಗಳ ಅಧಿವೇಶನದಲ್ಲಿ ಕನಿಷ್ಠ ಐದು ದಿನಗಳನ್ನು ಈ ಭಾಗದ ನೀರಾವರಿ, ಬರಗಾಲ, ರೈತರ ಸಮಸ್ಯೆ, ಕಬ್ಬಿನ ದರ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕುರಿತು ಚರ್ಚಿಸಲು ಮೀಸಲಿಡಬೇಕು ಎಂದು ತಿಳಿಸಿದರು.
ರೈತರಿಗೆ ₹2,500 ಪರಿಹಾರ ನೀಡುವುದಾಗಿ ಘೋಷಿಸಿ ಕೆಲವೆಡೆ ಮಾತ್ರ ಹಣ ಜಮೆಯಾಗಿದೆ. ಇನ್ನೂ ಅನೇಕ ರೈತರಿಗೆ ಪರಿಹಾರ ತಲುಪಿಲ್ಲ. ಎಲ್ಲ ಅರ್ಹ ರೈತರಿಗೂ ಪರಿಹಾರ ತಲುಪಿಸುವ ಜತೆಗೆ ಬರದಿಂದ ಉಂಟಾದ ನಷ್ಟಕ್ಕೆ ಅನುಗುಣವಾಗಿ ಹೆಚ್ಚಿನ ಪರಿಹಾರ ನೀಡಬೇಕು. ರೈತರ ಸಂಕಷ್ಟ, ಕಬ್ಬಿನ ಬೆಲೆ, ಬೆಲೆ ಏರಿಕೆ ಹಾಗೂ ಬರ ನಿರ್ವಹಣೆಯ ಲೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸಲಿದೆ. ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎನ್ನುವುದು ಸರಿಯಲ್ಲ. ರಸ್ತೆ, ಮೂಲಸೌಕರ್ಯ, ಶಾಲಾ-ಕಾಲೇಜುಗಳು, ನೀರಾವರಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ತಾಲೂಕುಗಳೆಂದು ಗುರುತಿಸಿದ್ದ ಹಲವು ತಾಲೂಕುಗಳಲ್ಲಿ ಈಗ ಪ್ರಗತಿ ಕಂಡುಬಂದಿದೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಸಮಗ್ರ ಅಭಿವೃದ್ಧಿಯಾಗಿಲ್ಲ. ದಕ್ಷಿಣ ಕರ್ನಾಟಕಕ್ಕೆ ನೀಡುವ ಆದ್ಯತೆಯನ್ನೇ ಉತ್ತರ ಕರ್ನಾಟಕಕ್ಕೂ ನೀಡಬೇಕು. ಈ ಭಾಗದ ಅಭಿವೃದ್ಧಿಗೆ ಎಲ್ಲ ಸರ್ಕಾರಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಕಾಣದಿರುವಾಗ ದಿವಂಗತ ಉಮೇಶ ಕತ್ತಿ ಅವರು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ಹಾಗೂ ಬೆಳಗಾವಿಯನ್ನು ಅದರ ರಾಜಧಾನಿಯನ್ನಾಗಿ ಮಾಡುವ ಕುರಿತು ಹೇಳುತ್ತಿದ್ದ ಮಾತುಗಳು ನೆನಪಾಗುತ್ತವೆ. ಆದರೆ, ಪ್ರತ್ಯೇಕ ರಾಜ್ಯದ ವಿಚಾರವನ್ನು ಈಗ ಬಿಜೆಪಿ ಅಧಿಕೃತ ನಿಲುವಾಗಿ ಪ್ರತಿಪಾದಿಸುತ್ತಿಲ್ಲ. ಉತ್ತರ ಕರ್ನಾಟಕಕ್ಕೆ ಇನ್ನಷ್ಟು ಅಭಿವೃದ್ಧಿ ಹಾಗೂ ನ್ಯಾಯ ದೊರೆಯಬೇಕೆಂಬುದೇ ನಮ್ಮ ಹೋರಾಟದ ಉದ್ದೇಶ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆ ಹಾಗೂ ರಾಜ್ಯ ಬಿಜೆಪಿಯಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ತರ ಕರ್ನಾಟಕದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಬೇಕು. ನೀರಾವರಿ, ರೈತರ ಸಮಸ್ಯೆ, ಬರಗಾಲ ಹಾಗೂ ಪ್ರಾದೇಶಿಕ ಅಭಿವೃದ್ಧಿ ವಿಚಾರಗಳಲ್ಲಿ ಪಕ್ಷಾತೀತವಾಗಿ ಧ್ವನಿ ಎತ್ತುವ ಅಗತ್ಯವಿದೆ. ಅಧಿವೇಶನದಲ್ಲಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಜನರಿಗೆ ನ್ಯಾಯ ದೊರಕಿಸಿಕೊಡಲು ಬಿಜೆಪಿ ಸದನದ ಒಳ- ಹೊರಗೂ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಪಿ.ರಾಜೀವ, ಅಣ್ಣಾಸಾಹೇಬ ಜೊಲ್ಲೆ, ದುರ್ಯೋಧನ ಐಹೊಳೆ, ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುಭಾಷ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.-------
ಬಾಕ್ಸ್ಸದನದ ಒಳ, ಹೊರಗೂ ಬಿಜೆಪಿ ಹೋರಾಟ
ಬೆಳಗಾವಿ ಗ್ರಾಮಾಂತರ, ಬೆಳಗಾವಿ ನಗರ ಹಾಗೂ ಚಿಕ್ಕೋಡಿ ಜಿಲ್ಲೆಗಳ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲಾಗಿದೆ. ಸುಮಾರು 10ರಿಂದ 15 ಸಾವಿರ ಜನರನ್ನು ಸೇರಿಸುವ ಗುರಿಯಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್. ಅಶೋಕ ಸೇರಿ ಹಿರಿಯ ನಾಯಕರು, ಹಾಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಡಿಸೆಂಬರ್ 2ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದ್ದು, ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು. ಸದನದ ಹೊರಗೆ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರೆ, ಸದನದ ಒಳಗೆ ಪ್ರತಿಪಕ್ಷದ ನಾಯಕರು ಹಾಗೂ ಶಾಸಕರು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸರ್ಕಾರವನ್ನು ಪ್ರಶ್ನಿಸಲಿದ್ದಾರೆ. ಈ ಬಾರಿ ಪಕ್ಷದ ಎಲ್ಲ ಮುಖಂಡರು, ಶಾಸಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ. ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.----
ಕೋಟ್ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು 5 ದಿನ ಮೀಸಲಿಡಬೇಕು. ಚರ್ಚೆ ಕೇವಲ ಹೇಳಿಕೆಗಳಿಗೆ ಸೀಮಿತವಾಗದೆ, ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಿ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಉತ್ತರ ಕರ್ನಾಟಕದ ಸಮಸ್ಯೆಗಳ ನಿರ್ಲಕ್ಷ್ಯ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿ.3ರಂದು ಬಿಜೆಪಿಯಿಂದ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು.
- ಬಾಲಚಂದ್ರ ಜಾರಕಿಹೊಳಿ, ಅರಭಾವಿ ಬಿಜೆಪಿ ಶಾಸಕ