ಹೊಸಪೇಟೆ: ರಾಜ್ಯದಲ್ಲಿ ನಿವೇಶನ ರಹಿತರಿಗೆ ಮುಂದಿನ ಒಂದು ವರ್ಷದಲ್ಲಿ ಸರ್ಕಾರದಿಂದಲೇ ಲೇ​ಔಟ್ ನಿರ್ಮಿಸಿ ನಿವೇಶನ ನೀಡುವ ಗುರಿ ಹೊಂದಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2021 ರ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ 36 ಲಕ್ಷ ಜನರು ನಿವೇಶನ ರಹಿತರಿದ್ದಾರೆ. ಅಂತಹ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸ್ವಾಮ್ಯದ ಜಾಗ ಅಥವಾ ಖಾಸಗಿ ವ್ಯಕ್ತಿಗಳಿಂದ ಖರೀದಿಸಿ ಬಡಾವಣೆ ನಿರ್ಮಿಸಿ ನಿವೇಶ ನೀಡಲಾಗುವದು. ರಾಜೀವ್ ಗಾಂಧಿ ಹೌಸಿಂಗ್ ನಿಗಮದ ಹೆಸರಿನಲ್ಲಿ 24 ಸಾವಿರ ಎಕರೆ ಜಮೀನಿದ್ದು ಇದರಲ್ಲಿ ಬಡಾವಣೆ ನಿರ್ಮಿಸಿ ಹಂತ ಹಂತವಾಗಿ ನಿವೇಶನ ರಹಿತರಿಗೆ ನಿವೇಶನಗಳನ್ನು ರಚನೆ ಮಾಡಿ ವಿತರಣೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 60 ಕೊಳಚೆ ಪ್ರದೇಶಗಳಿದ್ದು. ಈ ಪೈಕಿ 35 ಸರ್ಕಾರದ ಜಾಗ ಹಾಗೂ 25 ಖಾಸಗಿಯಾಗಿವೆ. ಸರ್ಕಾರಿ ಸ್ವಾಮ್ಯದಲ್ಲಿನ 35 ಕೊಳಚೆ ಪ್ರದೇಶದ ಎಲ್ಲಾ ನಿವಾಸಿಗಳಿಗೂ ಒಂದು ತಿಂಗಳ ಒಳಗಾಗಿ ಇ​ಖಾತಾ ನೀಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಕಡಕ್ ಸೂಚನೆ ನೀಡಿದರು.

ಜಿಲ್ಲೆಯ 6 ತಾಳೂಕಿಗೆ ಗ್ರಾಮೀಣ ವಸತಿ ಯೋಜನೆಯಡಿ ಮುಂದಿನ ಐದು ವರ್ಷದಲ್ಲಿ 58917 ಮನೆ ನಿರ್ಮಾಣಕ್ಕೆ ಭೌತಿಕ ಗುರಿ ಹೊಂದಲಾಗಿದೆ. ಇದಕ್ಕಾಗಿ ₹6048 ಕೋಟಿ ಅಂದಾಜು ಮಾಡಲಾಗಿದೆ. ಇದರಲ್ಲಿ ಬರುವ ವರ್ಷ 11782 ಮನೆಗಳ ನಿರ್ಮಾಣಕ್ಕೆ ₹191 ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.


ಈ ವೇಳೆ ಸದಸ್ಯರೊಬ್ಬರು ಮಾತನಾಡಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿ ಸಾಕಷ್ಟು ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದ್ದರಿಂದ ತಾಲ್ಲೂಕು ಮಟ್ಟದ ಸಭೆ ಆಯೋಜಿಸಿದಲ್ಲಿ ಸದಸ್ಯರು ತಮ್ಮ ವ್ಯಾಪ್ತಿಯ ಸಮಸ್ಯೆಗಳು ಹೇಳಿಕೊಳ್ಳಲು ಸಹಕಾರ ನೀಡಿದಂತಾಗುತ್ತದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದರು.

ಸಭೆಯಲ್ಲಿ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಎಂ.ಪಿ.ಲತಾ ಮಲ್ಲಿಕಾರ್ಜುನ, ಕೃಷ್ಣನಾಯ್ಕ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಂ ಷಾ, ಅರಣ್ಯ ಇಲಾಖೆ ಉಪ ಸಂರಕ್ಷಾಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.