ಸಾರಾಂಶ
ಕನ್ನಡಪ್ರಭ ವಾರ್ತೆ ಗುಡಿಬಂಡೆ
ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗದೇ, ಪಠ್ಯೇತರ ಚಟುವಟಿಕೆಗಳಲ್ಲೂ ಸಹ ಭಾಗಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಡಾಕೂಟಗಳಲ್ಲಿ ಭಾಗಿಯಾಗಬೇಕೆಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಸಲಹೆ ನೀಡಿದರು.ತಾಲೂಕಿನ ಸೋಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಠ್ಯಕ್ಕೇ ಸೀಮಿತರಾಗಬೇಡಿಅನೇಕ ಮಕ್ಕಳು ಕೇವಲ ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತರಾಗುತ್ತಾರೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಸಹ ಅತಿಮುಖ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾಕೂಟಗಳು, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗಬೇಕು. ಆಗ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಜೊತೆಗೆ ಪೋಷಕರಾಗಲಿ ಅಥವಾ ಶಿಕ್ಷಕರಾಗಲಿ ಮಕ್ಕಳಲ್ಲಿನ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಿಬಳಿಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಮಾತನಾಡಿ, ಇದೀಗ ನಡೆಯುತ್ತಿರುವ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗಿಯಾಗಬೇಕು. ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡಾಕೂಟಗಳಲ್ಲಿ ಭಾಗಿಯಾಗಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳು ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಜಯ ಗಳಿಸಿ ತಾಲೂಕಿನ ಕೀರ್ತಿ ಹೆಚ್ಚಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸೋಮೇನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಸುಮಂಗಳಮ್ಮ, ಟಿಪಿಒ ಮುರಳಿ, ಇಸಿಒ ನಂಜುಂಡಪ್ಪ, ಶಾಲೆಯ ಮುಖ್ಯಶಿಕ್ಷಕ ನಾಗಲಿಂಗಪ್ಪ, ಜಿಪಿಟಿ ಸಂಘದ ಅಧ್ಯಕ್ಷ ರಾಜಶೇಖರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಂಜಿನಪ್ಪ. ಪಿಡಿಒ ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.