ತಾಲೂಕಿನ ಹುಲ್ಲೂರ ಗ್ರಾಪಂ ವ್ಯಾಪ್ತಿಯ ಜಟ್ಟಗಿ ಕೆರೆಯ ದಡದಲ್ಲಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ ಕಾರ್ಯಕ್ರಮದಡಿ ನರೇಗಾ ಕೂಲಿ ಕಾರ್ಮಿಕರಿಗೆ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ತಾಲೂಕಿನ ಹುಲ್ಲೂರ ಗ್ರಾಪಂ ವ್ಯಾಪ್ತಿಯ ಜಟ್ಟಗಿ ಕೆರೆಯ ದಡದಲ್ಲಿ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ ಕಾರ್ಯಕ್ರಮದಡಿ ನರೇಗಾ ಕೂಲಿ ಕಾರ್ಮಿಕರಿಗೆ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.ಈ ವೇಳೆ ಮಾತನಾಡಿದ ತಾಪಂ ಇಒ ಸಂಗನಗೌಡ ಬಿರಾದಾರ, ಕಾರ್ಮಿಕರು ದೈನಂದಿನ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಕಾಮಗಾರಿ ಸ್ಥಳಗಳಲ್ಲಿಯೇ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಮಿಕರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್. ಗೌಡರ ಮಾತನಾಡಿ, ಅನಾರೋಗ್ಯಕರ ಆಹಾರ ಪದ್ಧತಿ, ನಿದ್ರೆಯ ಕೊರತೆ, ಮಾನಸಿಕ ಒತ್ತಡ, ದೈಹಿಕ ಚಟುವಟಿಕೆಗಳ ಕೊರತೆ ಹಾಗೂ ಅನುವಂಶಿಕ ಕಾರಣಗಳಿಂದ ಮಧುಮೇಹ ಕಾಯಿಲೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಪರೀಕ್ಷಿಸಿಕೊಳ್ಳಬೇಕು. ಶಿಸ್ತುಬದ್ಧ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ಎನ್ಸಿಡಿ ಆಪ್ತ ಸಮಾಲೋಚಕ ವೀರೇಶ ದಿಂಡವಾರ ಮಧುಮೇಹ ರೋಗದ ಲಕ್ಷಣಗಳು, ಕಾರಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸೆಯ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಒಟ್ಟು 78 ನರೇಗಾ ಕೂಲಿ ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ, ಕೆಮ್ಮು, ನೆಗಡಿ ಹಾಗೂ ಜ್ವರ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಹುಲ್ಲೂರ ಗ್ರಾಪಂ ಪಿಡಿಒ ರಾಜು ವಂದಾಲ, ಜಟ್ಟಗಿ ಗ್ರಾಮದ ಚಿದಾನಂದ ಮುತ್ತಗಿ ಮಾತನಾಡಿದರು. ಈ ಸಂದರ್ಭದಲ್ಲಿ ಹುಲ್ಲೂರ ಗ್ರಾಪಂನ ಜ್ಞಾನೇಶ್ ಮುರಾಳ, ತಾಪಂ ಸಂಯೋಜಕ ಪರಮೇಶ ಹೊಸಮನಿ, ಪಂಚಾಯಿತಿ ಕಾರ್ಯದರ್ಶಿ ಖನಿಜ ಫಾತಿಮಾ ರಾಜಹಮ್ಮದ್, ಹುಲ್ಲೂರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಮುತ್ತಣ್ಣ ಕಬಾಡೆ, ಎಲ್.ಟಿ.ಓ ಸಂಕಮ್ಮ ಹರವಿ ಸೇರಿ ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.