ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆಯ ಎರಡನೇ ಹಂತ ಮಂಗಳವಾರ ಆರಂಭಗೊಂಡಿತು. ಕಾರ್ಯಾಚರಣೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಮೇಲೆ ನಿರ್ಮಿಸಿದ್ದ ಮೀನು ಮಾರಾಟ ಮಳಿಗೆ ಹಾಗೂ ನಂದಿನಿ ಹಾಲಿನ ಕೇಂದ್ರ ಸೇರಿದಂತೆ ಹಲವು ಅತಿಕ್ರಮಣಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು.

ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಭದ್ರತೆಯಲ್ಲಿ ನಡೆದ ಕಾರ್ಯಾಚರಣೆ ವೇಳೆ ಹಲವು ಸ್ಥಳಗಳಲ್ಲಿ ಪುಟ್‌ಪಾತ್ ಅನ್ನು ಸಂಪೂರ್ಣವಾಗಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಯಿತು. ಇದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ.

ಪುರಸಭೆ ಮುಖ್ಯಾಧಿಕಾರಿ ಸುರೇಶ್ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಕಳೆದ ವಾರ ಮೊದಲ ಹಂತದ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ತೆರವುಗೊಳಿಸಲು ಒಂದು ವಾರದ ಕಾಲಾವಕಾಶ ಕೋರಿದ್ದರು. ಪುರಸಭೆಯಿಂದ ಗಡುವು ನೀಡಲಾಗಿತ್ತು. ಆದರೆ ಗಡುವು ಮುಕ್ತಾಯಗೊಂಡರೂ ಕೆಲವು ಅಂಗಡಿಗಳು ತೆರವಾಗದ ಹಿನ್ನೆಲೆ ಎರಡನೇ ಹಂತದ ಕಾರ್ಯಾಚರಣೆ ಆರಂಭಿಸಿ ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಅತಿಕ್ರಮಣ ತೆರವುಗೊಳಿಸಿದ ವ್ಯಾಪಾರಿಗಳ ಜೀವನೋಪಾಯಕ್ಕೆ ತೊಂದರೆಯಾಗದಂತೆ ಪಟ್ಟಣದ ಹೃದಯಭಾಗದಲ್ಲಿರುವ ಸಂತೆ ಮೈದಾನ ಹಾಗೂ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿ ಪರ್ಯಾಯವಾಗಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ವ್ಯಾಪಾರಿಗಳು ಈ ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.


ಪುರಸಭೆಯ ಮಾಜಿ ಸದಸ್ಯ ಮಧು, ಫುಟ್‌ ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದ್ದು, ಉಳಿದಿರುವ ಅತಿಕ್ರಮಣಗಳನ್ನೂ ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.