ವಿದ್ಯಾವಂತರು ಹೆಚ್ಚುತ್ತಿದ್ದರೂ ಸಹಿಷ್ಣುತೆ ಕಡಿಮೆ: ಡಿಸಿ ಮೀನಾ ನಾಗರಾಜ್

| Published : Oct 22 2025, 01:03 AM IST

ವಿದ್ಯಾವಂತರು ಹೆಚ್ಚುತ್ತಿದ್ದರೂ ಸಹಿಷ್ಣುತೆ ಕಡಿಮೆ: ಡಿಸಿ ಮೀನಾ ನಾಗರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ದಿನಮಾನಗಳಲ್ಲಿ ಜನರ ಮನಸ್ಥಿತಿ ಬದಲಾಗಿದ್ದು, ಸಾಮಾಜಿಕ ಜಾಲತಾಣ ಹೆಚ್ಚು ಹೆಚ್ಚು ಪ್ರಭಾವ ಬೀರುತ್ತಿವೆ. ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗುತ್ತಿದ್ದರೂ ಜನರಲ್ಲಿ ಸಹಿಷ್ಣುತೆ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಇಂದಿನ ದಿನಮಾನಗಳಲ್ಲಿ ಜನರ ಮನಸ್ಥಿತಿ ಬದಲಾಗಿದ್ದು, ಸಾಮಾಜಿಕ ಜಾಲತಾಣ ಹೆಚ್ಚು ಹೆಚ್ಚು ಪ್ರಭಾವ ಬೀರುತ್ತಿವೆ. ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗುತ್ತಿದ್ದರೂ ಜನರಲ್ಲಿ ಸಹಿಷ್ಣುತೆ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.

ನಗರದ ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆಯ ಹುತಾತ್ಮರ ಸ್ಮಾರಕದ ಆವರಣದಲ್ಲಿ ಮಂಗಳವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳ ಪ್ರಭಾವದ ನಡುವೆ ಸ್ವಯಂ ತೀರ್ಮಾನಕ್ಕೆ ಬರುವ ಜನರು ಕೇವಲ 20 ಸೆಕೆಂಡ್‌ಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಮನೋಭಾವದಿಂದ ಜನರು ಹೊರಬರಬೇಕು ಎಂದು ಹೇಳಿದರು.

ಪ್ರತಿ ವರ್ಷ ಹುತಾತ್ಮರ ಸಂಖ್ಯೆ ಹೆಚ್ಚುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ. ಇದು ಅತ್ಯಂತ ವಿಷಾದದ ಸಂಗತಿ. ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ನಿರ್ವಹಣೆಯೇ ವಿಭಿನ್ನವಾಗಿದ್ದು, ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ನಡೆದ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಬ್ಬಾಚರಣೆಗಳು, ಹಾಗೆಯೇ ದೇವೀರಮ್ಮ ಜಾತ್ರಾ ಮಹೋತ್ಸವದ ಕಳೆದ ಎರಡು ಮೂರು ದಿನಗಳೂ ಸೇರಿದಂತೆ ಸುಮಾರು 75 ದಿನಗಳಲ್ಲಿ ಒಂದು ದಿನವೂ ರಜೆ ಇಲ್ಲದೆ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ದೇವೀರಮ್ಮ ಜಾತ್ರೋತ್ಸವದ ಸಲುವಾಗಿ ಸುಮಾರು 75 ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಬೆಟ್ಟವೇರಿ ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿದ್ದಾರೆ. ಅದಕ್ಕೆಲ್ಲ ಸಕಾರಾತ್ಮಕವಾಗಿ ಸ್ಪಂದಿಸಿ ಪೊಲೀಸರು ಕಾರ್ಯ ನಿರ್ವಹಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ತುಕಡಿ ಅತ್ಯಂತ ಸಮರ್ಪಕವಾಗಿ ಕಾರ್ಯ ನಿರ್ವಹಿಸಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾತನಾಡಿ, 1959 ರ ಅಕ್ಟೋಬರ್ 21 ರಂದು ಗಡಿಯಲ್ಲಿರುವ ಲಡಾಖ್‌ನಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಚೀನಾ ಸೈನಿಕರು ಗಡಿ ಪ್ರವೇಶ ಮಾಡುವ ಪ್ರಯತ್ನದಲ್ಲಿದ್ದಾಗ ಕಡಿಮೆ ಶಸ್ತ್ರಾಸ್ತ್ರ ಹಾಗೂ ಕಡಿಮೆ ಸಂಖ್ಯೆಯಲ್ಲಿದ್ದ ಭಾರತದ ಧೀರ ಪೊಲೀಸರು ಅತ್ಯಂತ ದಿಟ್ಟತನದಿಂದ ಹೋರಾಡಿ ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ ಎಂದರು.

ಕಳೆದ ಒಂದು ವರ್ಷದಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ ಒಟ್ಟು 191 ಪೊಲೀಸರು ಸೇವೆಯಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇವರಲ್ಲಿ ಕರ್ನಾಟಕದ 8 ಧೀರ ಪೊಲೀಸರು ಸೇರಿದ್ದು, ಪೊಲೀಸರ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದು ತಿಳಿಸಿದರು.

ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ. ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ ಮಾಡಲು ಅದೇ ಸಾರ್ವಜನಿಕರ ಸಹಕಾರ ಸಹ ಇಲಾಖೆಗೆ ಅತ್ಯಗತ್ಯ ಎಂದರು.

ಇದೇ ವೇಳೆ ಈ ವರ್ಷ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿ ಸಿಬ್ಬಂದಿಯ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಓದಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸಿ.ಟಿ.ಜಯಕುಮಾರ್ ಉಪಸ್ಥಿತರಿದ್ದರು.