ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ನಗರದ ಸಾಲಗಾಮೆ ರಸ್ತೆ ಬಳಿ ಇರುವ ಕಲಾ ಕಾಲೇಜು ಮೈದಾನದಲ್ಲಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪಕ್ಷಾತೀತವಾಗಿ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಗತವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ನಗರದಲ್ಲಿ ಒಂದು ದೊಡ್ಡಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂಬ ಉದ್ದೇಶದಿಂದ ಇತ್ತೀಚೆಗೆ ಎಸ್.ಡಿ.ಎಂ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯು ಶಿಕ್ಷಣದ ಜತೆಗೆ ಸಂಗೀತ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಯ ವೈಭವವನ್ನು ವಿದ್ಯಾರ್ಥಿಗಳ ಮೂಲಕ ಅನಾವರಣಗೊಳಿಸುವ ಕೆಲಸ ಮಾಡುತ್ತಿದ್ದಾರೆ. ದೇಸಿ ಸೊಗಡಿನ ಕಲೆಯನ್ನು ಉಳಿಸುವ ಕೆಲಸವನ್ನು ಹಲವಾರು ವರ್ಷಗಳಿಂದ ನಿರ್ವಹಿಸುತ್ತಿದ್ದಾರೆ. ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ೩೫೦ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಾಂಸ್ಕೃತಿಕ ವೈಭವದಲ್ಲಿ ಶಾಸ್ತ್ರೀಯ ನೃತ್ಯ, ಆಂಧ್ರದ ಜನಪದಬಂಜಾರ, ಬಡಗತಿಟ್ಟು ಯಕ್ಷಗಾನ, ಮಣಿಪುರಿ ಸ್ಟಿಕ್ ಡಾನ್ಸ್, ಶಾಸ್ತ್ರಿಯ ನೃತ್ಯ, ಗುಜರಾತಿನ ಗರ್ಭ ಮತ್ತು ದಾಂಡಿಯಾನೃತ್ಯ, ಮಲ್ಲಕಂ ಬ ಮತ್ತು ರೋಪ್ ಕಸರತ್ತು, ಡೊಳ್ಳುಕುಣಿತ, ಕಥಕ್ ನೃತ್ಯ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಪುರಲಿಯಾ ಇತರೆ ನೃತ್ಯ ಪ್ರಕಾರಗಳು ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಪಕ್ಷಾತೀತವಾಗಿ, ಜಾತ್ಯತೀತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೂವತ್ತಕ್ಕೂ ಹೆಚ್ಚು ಕಲಾ ತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಈಗಾಗಲೇ ನಿಂತು ಹೋಗಿರುವ ಹೊಯ್ಸಳ ಉತ್ಸವವನ್ನು ಮತ್ತೆ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಗಮನಕ್ಕೆ ತರಲಾಗಿ ಗಮನಸೆಳೆದು ಮತ್ತೆ ಪುನರಾಂಭಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಸನಾಂಬ ಕಲಾಕ್ಷೇತ್ರಕ್ಕೆ ಹೆಚ್ಚಿನ ಅಭಿವೃದ್ಧಿಗೆ ೨ ಕೋಟಿ ನೆರವು ಕೇಳಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಟರ್ಫ್ ಮೈದಾನ ನಿರ್ಮಾಣಕ್ಕೂ ಹಣಕಾಸಿನ ನೆರವು ಕೇಳಲಾಗಿದೆ ಎಂದರು.
ಕೇಂದ್ರ ಬಜೆಟ್ ನಮಗೆ ತೃಪ್ತಿ ನೀಡಿದೆ. ಜಿಲ್ಲೆಯಲ್ಲಿ ಕೈಗಾರಿಕೆ ಆರಂಭಿಸುವ ಬಗ್ಗೆ ಚರ್ಚೆ ಮಾಡೋಣ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದರು. ನಗರ ವ್ಯಾಪ್ತಿಯಲ್ಲಿ ಪಾರ್ಕ್ ಅಭಿವೃದ್ಧಿ, ಸತ್ಯಮಂಗಲ ಬಡಾವಣೆಗೆ ಹೇಮಾವತಿ ನೀರು ಕೊಡುವ ಕಾಮಗಾರಿ ನಡೆಯುತ್ತಿದೆ. ನಗರಸಭೆಯಿಂದ ಸುಮಾರು ೩೫ ಕೋಟಿ ರು. ವೆಚ್ಚದಲ್ಲಿ ರಸ್ತೆ, ಒಳ ಚರಂಡಿ ಇತ್ಯಾದಿ ಕಾಮಗಾರಿ ಕೈಗೊಳ್ಳಲು ಇಂದಿನಿಂದಲೇ ಟೆಂಡರ್ ಕರೆಯುವ ಪ್ರಕ್ರಿಯೆ ಶುರುವಾಗಬೇಕಿದೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ, ಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು, ಜೆಡಿಎಸ್ ಮುಖಂಡ ಶಿವಣ್ಣ, ಇತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))