ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧ: ಸಚಿವ ಶಿವರಾಜ ತಂಗಡಗಿ

| Published : Nov 02 2024, 01:31 AM IST

ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧ: ಸಚಿವ ಶಿವರಾಜ ತಂಗಡಗಿ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಸರ್ಕಾರವು ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ.

69ನೇ ಕರ್ನಾಟಕ ರಾಜ್ಯೋತ್ಸವ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣಕನ್ನಡಪ್ರಭ ವಾರ್ತೆ ಕೊಪ್ಪಳ

ನಮ್ಮ ಸರ್ಕಾರವು ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಆಲೂರು ವೆಂಕಟರಾವ್ 1905ರಲ್ಲಿಯೇ ಕರ್ನಾಟಕ ಏಕೀಕರಣ ಚಳವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸನ್ನು ಕಂಡ ಮೊದಲ ವ್ಯಕ್ತಿಯಾಗಿದ್ದರು. ಬ್ರಿಟಿಷರ ಅಧಿಕಾರದ ಅವಧಿಯಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟದ ಪ್ರತಿಫಲವಾಗಿ 1956ರ ನವೆಂಬರ್ 1ರಂದು ನಮ್ಮ ರಾಜ್ಯ ಉದಯವಾಯಿತು.

ರಾಜ್ಯದ ಪ್ರಗತಿಗೆ ಭದ್ರ ಬುನಾದಿ ಹಾಕಿದ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ ಗಟ್ಟಿ ನಿರ್ಧಾರದಿಂದ 1973ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಿದರು.

ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಭೀಮನಗೌಡ ಪಾಟೀಲ್, ಹನುಮರಡ್ಡಿ ಕಲ್ಗುಡಿ, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ, ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ಈ ಮಹನೀಯರನ್ನು ಸ್ಮರಿಸಲೇಬೇಕೆಂದು ಹೇಳಿದರು.

ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆ ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ. ನಮ್ಮ ರಾಜ್ಯ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದರು.

ಸಂಸದ ಕೆ. ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷ ಅಮ್ಜಾದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ, ಕೊಪ್ಪಳ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯಾ ಚತುರ್ವೇದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಮೆರವಣಿಗೆ:

69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಬೆಳಗ್ಗೆ ಕೊಪ್ಪಳ ತಹಶೀಲ್ದಾರ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದ ವರೆಗೆ ಹಮ್ಮಿಕೊಂಡ ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಅಮ್ಜಾದ್ ಪಟೇಲ್ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಸೀಲ್ದಾರ ವಿಠ್ಠಲ ಚೌಗಲಾ, ತಾಪಂ ಇಓ ದುಂಡಪ್ಪ ತುರಾದಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಆಕರ್ಷಕ ಪಥಸಂಚಲನ:ಕನ್ನಡ ರಾಜ್ಯೋತ್ಸವದ ನಿಮಿತ್ತ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.ಜಿಲ್ಲೆಯ ಪ್ರವಾಸಿ ತಾಣಗಳ ಕಿರು ಕೈಪಿಡಿ ಬಿಡುಗಡೆ:ಪ್ರವಾಸೋದ್ಯಮ ಇಲಾಖೆಯಿಂದ ಸಿದ್ಧಪಡಿಸಿದ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿಯನ್ನೊಳಗೊಂಡ ಕಿರು ಕೈಪಿಡಿಯನ್ನು ಸಚಿವರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದೇ ಸಂದರ್ಭ ಬಿಡುಗಡೆಗೊಳಿಸಿದರು.ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ:ರಾಜ್ಯೋತ್ಸವದ ನಿಮಿತ್ತ ಭಾಗ್ಯನಗರದ ನವಚೇತನ ಪಿಯು ಕಾಲೇಜು ಹಾಗೂ ಕೊಪ್ಪಳದ ಬಾಲಕಿಯರ ಪದವಿ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳಿಗೆ ನೃತ್ಯ ಮಾಡಿದರು. ಪಥಸಂಚಲನದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಬಹುಮಾನ ನೀಡಲಾಯಿತು. ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲೆಗೆ ಹೆಸರು ತಂದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.