ಸಾರಾಂಶ
ಅಮರಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಬುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಬೇಲೂರು ಹಳೆಬೀಡು ಸೇರಿದಂತೆ ಹಲವು ಸ್ಥಳಗಳಲ್ಲಿ ಅವರು ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಇಂತಹ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಕನ್ನಡಪ್ರಭ ವಾರ್ತೆ ನಾಗಮಂಗಲ
ಜಗತ್ತಿನ ಅತ್ಯದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಅಮರಶಿಲ್ಪಿ ಜಕಣಾಚಾರಿ ಅವರು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಷ್ಟು ಬಹುದೊಡ್ಡ ಸಾಧನೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಜಿ.ಆದರ್ಶ್ ಹೇಳಿದರು.ಪಟ್ಟಣದ ತಾಲೂಕು ಆಡಳಿತಸೌಧದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಅಮರಶಿಲ್ಪಿ ಜಕಣಾಚಾರಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಅಮರಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಬುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸುತ್ತವೆ. ಬೇಲೂರು ಹಳೆಬೀಡು ಸೇರಿದಂತೆ ಹಲವು ಸ್ಥಳಗಳಲ್ಲಿ ಅವರು ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಇಂತಹ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.ಮಾಡುವ ಕೆಲಸದ ಬಗ್ಗೆ ತಿಳಿವಳಿಕೆ, ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆ ಇದ್ದಲ್ಲಿ ಖಂಡಿತ ಯಶಸ್ಸು ಸಿಗುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರಷ್ಟೇ ಸಾಲದು, ಅವರ ಗುಣ ಬೆಳೆದುಬಂದ ಪರಿಶ್ರಮದ ಘಟನೆಗಳನ್ನು ತಿಳಿದುಕೊಳ್ಳುವ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ದಿನಾಚರಣೆಗೆ ನಿಜವಾದ ಅರ್ಥ ಸಿಗುತ್ತದೆ ಎಂದರು.
ತಾಲೂಕು ಎಸ್‌ಎಸ್‌ಕೆ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಲ್ಕುಂದಿ ಕೃಷ್ಣಾಚಾರ್ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ನೀಡಿರುವ ಕೊಡುಗೆ ಅಪಾರ. ಒಳ್ಳೆಯ ಕೆಲಸ ಮತ್ತು ಉತ್ತಮ ಸೇವೆ ಮಾಡಿದರೆ ಸಮಾಜದಲ್ಲಿ ಶಾಶ್ವತವಾಗಿ ಉಳಿಯಬಹುದು ಎಂಬುದಕ್ಕೆ ಅಮರಶಿಲ್ಪಿ ಜಕಣಾಚಾರಿ ಅವರೇ ನಿದರ್ಶನವಾಗಿದ್ದಾರೆ ಎಂದರು.ಇದೇ ವೇಳೆ ಕಂದಾಯ ಇಲಾಖೆ ಅಧಿಕಾರಿಗಳಾದ ಮಂಜುನಾಥ್, ಮಲ್ಲಿಕಾರ್ಜುನಸ್ವಾಮಿ, ವಿಶ್ವಕರ್ಮ ಸಮಾಜದ ಮುಖಂಡರಾದ ಅಶೋಕ್, ರಾಜು, ಉಮೇಶ್, ಅಭಿಷೇಕ್, ಪ್ರಕಾಶ್, ನಾಗೇಶ್, ಚಂದ್ರಕಲಾ, ನಂದಿನಿ, ಮಮತ ಸೇರಿದಂತೆ ಹಲವರು ಇದ್ದರು.