ಜನ್ಮದಿನಾಚರಣೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಣ್ಣನೆ । ಸಾಧಕರಿಗೆ ಅಂಬೇಡ್ಕರ್ ಪ್ರಶಸ್ತಿ ಪ್ರದಾನ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬಿ.ಆರ್.ಅಂಬೇಡ್ಕರ್ ಅವರು ಅಸಮಾನತೆ ಮನಸ್ಥಿತಿ ಹೋಗಲಾಡಿಸಿದ ಕ್ರಾಂತಿ ಪುರುಷ ಮಾತ್ರವಲ್ಲದೇ ಭಾರತೀಯ ಜಲ ನೀತಿಯ ಪಿತಾಮಹ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ನೀರಾವರಿ ಕ್ಷೇತ್ರಕ್ಕೆ ಮುನ್ನೋಟ ಒದಗಿಸಿದ್ದ ಅಂಬೇಡ್ಕರ್, ನದಿ ಜೋಡಣೆಯ ಪರಿಕಲ್ಪನೆಯನ್ನು ಮೊಟ್ಟಮೊದಲ ಬಾರಿಗೆ ಪ್ರತಿಪಾದಿಸಿದ್ದರೆಂದರು.
ಅಂಬೇಡ್ಕರ್ ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರೊಬ್ಬ ಕ್ರಾಂತಿ ಮತ್ತು ಚಳುವಳಿಯ ಶಕ್ತಿಯಾಗಿದ್ದಾರೆ. ಅಂಬೇಡ್ಕರ್ ಶಿಕ್ಷಣವನ್ನು ಪ್ರಮುಖ ಅಸ್ತ್ರವೆಂದು ನಂಬಿದ್ದರು. ಶಿಕ್ಷಣ ಪುರುಷರಿಗೆ ಸೀಮಿತವಾಗದೆ, ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೂ ಸಮಾನವಾಗಿ ಸಿಗಬೇಕು ಎಂಬುದು ಅವರ ಆಶಯವಾಗಿತ್ತು. ಅಸ್ಪೃಶ್ಯತೆ ಎಂಬ ಅಸಮಾನತೆಯನ್ನು ಹೋಗಲಾಡಿಸಲು ಅವರು ತಮ್ಮ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು. ಅವರು ದೇಶದ ಪ್ರತಿಯೊಬ್ಬರಿಗೂ ಮತ್ತು ಎಲ್ಲಾ ಸಮುದಾಯಗಳಿಗೂ ಸೇರಿದ ನಾಯಕರಾಗಿದ್ದಾರೆ ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಮಾತನಾಡಿ, ಶತಮಾನಗಳಿಂದ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಇಂದು ಉದ್ಯೋಗ, ದೇಶ ಸೇವೆ ಮತ್ತು ರಕ್ಷಣಾ ವಲಯಗಳಲ್ಲಿ ಪುರುಷರಿಗೆ ಸಮಾನವಾಗಿ ನಿಲ್ಲಲು ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವೇ ಕಾರಣ. ಸಂವಿಧಾನದ ಪೀಠಿಕೆಯನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ದೇಶದ ಏಕತೆ ಮತ್ತು ಒಗ್ಗಟ್ಟನ್ನು ಕಾಪಾಡಬೇಕು. ಸೂರ್ಯ-ಚಂದ್ರರಿರುವವರೆಗೂ ಸಂವಿಧಾನ ಅಜರಾಮರವಾಗಿರುತ್ತದೆ ಎಂದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ವಿಶ್ವಕ್ಕೆ ಮಾದರಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ರೂಪಿಸಿ, ಸಮಾನ ಪಾಲು ಮತ್ತು ಸಮಾನ ಬಾಳಿನ ಹಕ್ಕು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಜನರಿಗಾಗಿ ಶ್ರಮಿಸಿರುವ ಸಾಧಕರಿಗೆ ಜಿಲ್ಲಾಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಮ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ತಹಸೀಲ್ದಾರ್ ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಸೇರಿದಂತೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಪರಿಶಿಷ್ಟ ಜಾತಿ, ಪಂಗಡ, ಇತರೆ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಇದ್ದರು.