ಶಾಸಕ ಎಚ್.ಪಿ. ಸ್ವರೂಪ್ ಮಾತನಾಡಿ, ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ರೂಪಿಸಿ ದೇಶಕ್ಕೆ ಬಲಿಷ್ಠ ಸಂವಿಧಾನ ನೀಡಿದ ಕೀರ್ತಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅವರ ದೂರದೃಷ್ಟಿ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳು ನಮ್ಮ ದೇಶದ ಬೆಳವಣಿಗೆಗೆ ದಾರಿದೀಪವಾಗಿವೆ ಎಂದು ಹೇಳಿದರು. ಇಂದಿನ ದಿನದಲ್ಲಿ ಭಾರತ ಮಾತ್ರವಲ್ಲದೆ ವಿಶ್ವದ ಅನೇಕ ದೇಶಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿರುವುದು ಅವರ ಮಹತ್ವದ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ ಮಂಗಳವಾರ ನಡೆದ ಮೆರವಣಿಗೆ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಮೊದಲು ಶಾಸಕ ಎಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮೆರವಣಿಗೆ ನಗರ ಪ್ರಮುಖ ರಸ್ತೆಗಳಲ್ಲಿ ಸಾಗಿದ್ದು, ವಿವಿಧ ಕಲಾ ತಂಡಗಳು, ಜಾನಪದ ಕಲಾವಿದರು ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು. ಈ ವೇಳೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಮಾತನಾಡಿ, ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ರೂಪಿಸಿ ದೇಶಕ್ಕೆ ಬಲಿಷ್ಠ ಸಂವಿಧಾನ ನೀಡಿದ ಕೀರ್ತಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅವರ ದೂರದೃಷ್ಟಿ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳು ನಮ್ಮ ದೇಶದ ಬೆಳವಣಿಗೆಗೆ ದಾರಿದೀಪವಾಗಿವೆ ಎಂದು ಹೇಳಿದರು. ಇಂದಿನ ದಿನದಲ್ಲಿ ಭಾರತ ಮಾತ್ರವಲ್ಲದೆ ವಿಶ್ವದ ಅನೇಕ ದೇಶಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿರುವುದು ಅವರ ಮಹತ್ವದ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರು ಮಹಿಳೆಯರಿಗೆ ಗೌರವ ಮತ್ತು ಸಮಾನ ಹಕ್ಕುಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವಿಶ್ವಕ್ಕೆ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ಚಿಂತಕರಾದ ಅವರು ಸಮಾನತೆಯ ಸಮಾಜ ನಿರ್ಮಾಣಕ್ಕೆ ದಿಕ್ಕು ತೋರಿದ್ದಾರೆ. ಅವರ ತತ್ವಗಳು ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಮಂತ್ರದ ಮೂಲಕ ಸಮಾಜದಲ್ಲಿ ಸಮಾನತೆ ಸ್ಥಾಪಿಸಲು ಶ್ರಮಿಸಿದರು. ಅವರ ತತ್ವಗಳನ್ನು ಅನುಸರಿಸುವುದೇ ಅವರಿಗಿರುವ ನಿಜವಾದ ಗೌರವ ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಹಾಸನಾಂಬ ಕಲಾಕ್ಷೇತ್ರದವರೆಗೆ ಕಾಲ್ನಡಿಗೆಯಲ್ಲಿ ಸಾಗಿತು. ಮಾರ್ಗಮಧ್ಯೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಘೋಷಣೆಗಳು ಹಾಗೂ ಜನಸಾಗರ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದವು.
ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರ ಆದರ್ಶಗಳನ್ನು ಸ್ಮರಿಸಿದರು.