ಧಾರವಾಡ:

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಚಾಲನೆ ನೀಡಿದರು.

ವಿವಿಧ ಕಲಾತಂಡದೊಂದಿಗೆ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಭಾವಚಿತ್ರದ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪ್ರಾರಂಭವಾಗಿ ಕೋರ್ಟ್‌ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ್‌, ಮೇದಾರ ಓಣಿ, ಕೆಸಿಸಿ ಬ್ಯಾಂಕ್ ಮೂಲಕ ಕರ್ನಾಟಕ ವಿದ್ಯಾವರ್ಧಕ ಸಂಘದದವರೆಗೆ ಜರುಗಿತು.

ಈ ವೇಳೆ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಾಧರ ದೊಡಮನಿ, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಡಾ. ಎಸ್.ವಿ. ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಎಲ್ಲ ಸಮುದಾಯದ ಮುಖಂಡರು, ಗಣ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಯಲ್ಲಿ ಜಾನಪದ ಕುಣಿತ, ಕರಡಿ ಮಜಲು, ನಂದಿಕೋಲು, ಜಗ್ಗಲಿಗಿ ಮೇಳ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿ, ಮೆರವಣಿಗೆಯ ಮೆರಗು ಹೆಚ್ಚಿಸಿದವು. ಪ್ರತಿಮೆಗೆ ಮಾಲಾರ್ಪಣೆ:

ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು.