ಡಾ. ಬಿ.ಆರ್. ಅಂಬೇಡ್ಕರ್ ಇಡೀ ಮಾನವ ಸಮುದಾಯಕ್ಕೆ ನೀಡಿರುವ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಅನುಸರಿಸಿ, ಅದರಂತೆ ನಡೆಯುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿ, ಪ್ರತಿದಿನವೂ ಅವರನ್ನು ನೆನೆಯಬೇಕು.

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಕಾರವಾರ

ಡಾ. ಬಿ.ಆರ್. ಅಂಬೇಡ್ಕರ್ ಇಡೀ ಮಾನವ ಸಮುದಾಯಕ್ಕೆ ನೀಡಿರುವ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಅನುಸರಿಸಿ, ಅದರಂತೆ ನಡೆಯುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿ, ಪ್ರತಿದಿನವೂ ಅವರನ್ನು ನೆನೆಯಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.

ಮಂಗಳವಾರ ನಗರದ ದೋಭಿಘಾಟ್ ರಸ್ತೆಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು.ದೇಶದ ಎಲ್ಲಾ ಸಮುದಾಯಗಳು, ಎಲ್ಲಾ ಕ್ಷೇತ್ರಗಳಲ್ಲೂ ಸಮಾನವಾಗಿ ಅಭಿವೃದ್ದಿ ಹೊಂದಲಿ ಎಂಬ ಉದ್ದೇಶದಿಂದ ಅಂಬೇಡ್ಕರ್ ಅವರು ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗದ ಜನತೆ ಸೇರಿದಂತೆ ಪ್ರತಿಯೊಬ್ಬರಿಗೂ ಸಂವಿಧಾನದ ಮೂಲಕ ಸಮಾನ ಅವಕಾಶಗಳು ದೊರೆಯುವಂತೆ ಮಾಡಿದ್ದಾರೆ. ಅವರ ಈ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ದೈನಂದಿನ ಚಟುವಟಿಕೆಗಳ ಎಲ್ಲಾ ಕ್ಷೇತ್ರಗಳಲ್ಲೂ ಅಳಡಿಸಿಕೊಂಡು, ತಮಗಿಂತ ಹಿಂದುಳಿದವರು ತಮ್ಮ ಜೊತೆಗೆ ಸಮಾನವಾಗಿ ಅಭಿವೃಧ್ದಿ ಹೊಂದಲು ಅಗತ್ಯವಿರುವ ಅವಕಾಶ ಒದಗಿಸಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಂಬೇಡ್ಕರ್ ನೀಡಿರುವ, ಶಿಕ್ಷಣ, ಸಂಘಟನೆ, ಹೋರಾಟದ ಸಂದೇಶಗಳ ಮೂಲಕ ಅವಕಾಶ ವಂಚಿತರ ಅಭಿವೃಧ್ದಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

ಅಂಕೋಲಾದ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಜುನಾಥ ಇಟಗಿ, ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಜಿಲ್ಲೆಯ ಅಭ್ಯರ್ಥಿಗಳಿಗೆ ಸನ್ಮಾನ ಮತ್ತು ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ನಾಯ್ಕ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೈ.ಕೆ. ಉಮೇಶ್, ಪ.ಜಾತಿ ಪಂಗಡದ ಮುಖಂಡರಾದ ದೀಪಕ್ ಕುಡಾಲಕರ್, ಎಲಿಷಾ ಪಾಟೀಲ್, ನಾಗರಾಜ ತಳವಾರ ಇದ್ದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು.