ಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಗಿಂತ ಹಣ ವಸೂಲಿಗೆ ಆದ್ಯತೆ ನೀಡುತ್ತಿದ್ದಾರೆ. ಸಿ.ಎಲ್.-೨, ಸಿ.ಎಲ್.-೯ ಹಾಗೂ ಸಿ.ಎಲ್.-೭ ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು, ಅಕ್ರಮ ಬ್ಲೆಂಡಿಂಗ್ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ.

ಕನ್ನಡಪ್ರಭ ವಾರ್ತೆ ಕೋಲಾರ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ, ಅಬಕಾರಿ ನಿರೀಕ್ಷಕಿ ರಮಾಮಣಿ ಅವರನ್ನು ಅಮಾನತುಗೊಳಿಸಬೇಕು ಹಾಗೂ ಮಾಲೂರು ತಾಲೂಕಿನ ಸಿ.ಎಲ್.-೭ ಬಾರ್ ಮತ್ತು ರೆಸಿಡೆನ್ಸಿಗಳ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಬಳಗದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ತಮಟೆ ಚಳವಳಿ ಮೂಲಕ ನಗರದ ನಚಿಕೇತ ನಿಲಯದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌ರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಲಾಯಿತು. ಅಂಬೇಡ್ಕರ್ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜೈಭೀಮ್ ಮಂಜು ಮಾತನಾಡಿ, ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಗಿಂತ ಹಣ ವಸೂಲಿಗೆ ಆದ್ಯತೆ ನೀಡುತ್ತಿದ್ದಾರೆ. ಸಿ.ಎಲ್.-೨, ಸಿ.ಎಲ್.-೯ ಹಾಗೂ ಸಿ.ಎಲ್.-೭ ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು, ಅಕ್ರಮ ಬ್ಲೆಂಡಿಂಗ್ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.ಅಕ್ರಮಗಳಿಗೆ ಸಂಬಂಧಿಸಿದಂತೆ ಶಂಕರ್ ಪ್ರಸಾದ್ ಸಿ.ಡಿ ಮತ್ತು ವಿಡಿಯೋ ಸೇರಿದಂತೆ ಸಾಕ್ಷ್ಯಾಧಾರಗಳನ್ನು ನೀಡಿದ್ದರೂ ಪ್ರಯೋಜನವಾಗಿಲ್ಲ. ಅಬಕಾರಿ ಉಪ ಆಯುಕ್ತರ ಗಮನಕ್ಕೆ ತಂದರೂ ಸ್ಪಂದನೆ ದೊರೆತಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಬಾರ್‌ಗಳ ಮೇಲೆ ಪರಿಶೀಲನೆ ನಡೆಸಬೇಕು. ಜಿಲ್ಲಾಧಿಕಾರಿ ಕಡೆಯಿಂದ ಸೂಕ್ತ ತನಿಖೆ ನಡೆಸುವ ವಿಶ್ವಾಸವಿದೆ. ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯ ನೇತೃತ್ವವನ್ನು ಬಳಗದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಖಾದ್ರಿಪುರ ಉಮಾ ನಾರಾಯಣ, ತಾಲೂಕು ಅಧ್ಯಕ್ಷ ಎ. ನವೀನ್, ಸುಗಟೂರು ಮೂರ್ತಿ, ಕೀಲುಕೋಟೆ ಬಾಲಾಜಿ, ಲಕ್ಷ್ಮೀಪತಿ, ಮಹೇಶ್, ಮಂಜು ಮಹೇಶ್, ಗಜಾ, ಲಕ್ಷ್ಮಮ್ಮ, ಗಂಗಾ, ನ್ಯಾರೇಮ್ಮ, ಸರಿತಾ ಇದ್ದರು.