ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಬುಧವಾರನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಆ್ಯಂಬುಲೆನ್ಸ್ ಸೌಲಭ್ಯ ಇರಬೇಕು. ಜೊತೆಗೆ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಸೌಕರ್ಯ ಇಲ್ಲವೆಂದು ಕೇಳಿ ಬರಬಾರದು. ಹೆರಿಗೆಗೆ ದಾಖಲಾಗುವ ತಾಯಿಯ ಆರೋಗ್ಯ ಕಾಪಾಡುವುದು ಅತಿ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶೇಕಡವಾರು ಹೆರಿಗೆ, ಶಸ್ತ್ರ ಚಿಕಿತ್ಸೆ, ತಾಯಿ ಮತ್ತು ಶಿಶು ಸಂರಕ್ಷಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ 2023 ರ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ ಹೆರಿಗೆ ಸಂದರ್ಭದಲ್ಲಿ ಮೂವರು ತಾಯಂದಿರು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಹಾಗೆಯೇ 2023 ರ ಏಪ್ರಿಲ್‍ನಿಂದ ಡಿಸೆಂಬರ್, ಅಂತ್ಯದವರೆಗೆ 34 ಶಿಶುಗಳು ನಾನಾ ಕಾರಣಗಳಿಂದ ಮರಣ ಹೊಂದಿವೆ ಎಂದು ತಿಳಿಸಿದರು. ತಾಯಿ ಮತ್ತು ಶಿಶು ಮರಣ ಸಂಬಂಧ ಪೋಷಕರಿಂದ ಜಿಲ್ಲಾಧಿಕಾರಿ ಮಾಹಿತಿ ಪಡೆದರು.’
ಕ್ಷಯರೋಗ, ಮಲೇರಿಯಾ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಪ್ರಗತಿ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು.ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯರಾದ ಡಾ. ಸೋಮಶೇಖರ್, ಡಾ.ಪುರುಷೋತ್ತಮ, ಡಾ.ಚೇತನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಕಾರ್ಯಕ್ರಮ ಸಂಯೋಜಕರಾದ ಕೃಷ್ಣಪ್ಪ, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ, ವೈದ್ಯಾಧಿಕಾರಿಗಳು ಇದ್ದರು.