ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ

| Published : May 25 2024, 12:46 AM IST

ಸಾರಾಂಶ

ಇಂದಿನ ಯುವ ಪೀಳಿಗೆಯು ಕೌಶಲ್ಯ ಚಟುವಟಿಕೆಗಳಲ್ಲಿ ತರಬೇತಿ ಪಡೆದರೆ, ಹೋಟೆಲ್ ಮ್ಯಾನೇಜ್‍ಮೆಂಟ್ ಸೇರಿದಂತೆ ವಿವಿಧ ರಂಗಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು

ಬಳ್ಳಾರಿ: ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ವಿಪುಲವಾದ ಉದ್ಯೋಗ ಅವಕಾಶಗಳಿದ್ದು, ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನಡಿ 60 ದಿನದ ಕೌಶಲ್ಯ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವ ಪೀಳಿಗೆಯು ಕೌಶಲ್ಯ ಚಟುವಟಿಕೆಗಳಲ್ಲಿ ತರಬೇತಿ ಪಡೆದರೆ, ಹೋಟೆಲ್ ಮ್ಯಾನೇಜ್‍ಮೆಂಟ್ ಸೇರಿದಂತೆ ವಿವಿಧ ರಂಗಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರ ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನಡಿ 60 ದಿನದ ಕೌಶಲ್ಯ ತರಬೇತಿ ನೀಡಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ

ಹೋಟೆಲ್‍ಗಳಲ್ಲಿ ಸಂದರ್ಶನದ ಮೂಲಕ ಉದ್ಯೋಗ ಕಲ್ಪಿಸಿದ್ದು ಆಯ್ಕೆಯಾದವರು ಸಾಧನೆಯ ಹಾದಿ ಮುಂದುವರಿಸಬೇಕು ಎಂದು ಆಶಿಸಿದರು.

ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಒಂದು ದೇಶ ಅಭಿವೃದ್ಧಿಯಾಗಲು ಮೂರು ಪ್ರಮುಖ ಕ್ಷೇತ್ರಗಳಾದ ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳ ಪಾತ್ರ ಬಹುಮುಖ್ಯವಾಗಿದ್ದು, ಅದರಲ್ಲಿ ಸೇವಾ ವಲಯದಿಂದ ಯುವ ಪೀಳಿಗೆಗೆ ಉದ್ಯೋಗಗಳು ಹೆಚ್ಚಾಗಿ ಸೃಷ್ಟಿಯಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.

ಈ ಭಾಗದಲ್ಲಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಾಗಿದ್ದು, ಆಸಕ್ತರು ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ ಪಡೆದು ಉದ್ಯೋಗಾವಕಾಶದ ಸದುಪಯೋಗ ಪಡೆದುಕೊಳ್ಳಬೇಕು. ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಉತ್ತುಂಗ ಸ್ಥಾನಕ್ಕೆ ತಲುಪುವಿರಿ ಎಂದು ಹೇಳಿದರು.

ಹೋಟೆಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನ ಕೌಶಲ್ಯ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅಂತಾರಾಷ್ಟ್ರೀಯ ದರ್ಜೆಯ ಹೋಟೆಲ್‍ಗಳಾದ ಎವಾಲ್ವ್ ಬ್ಲಾಕ್, ವಿಜಯಶ್ರೀ ಹೆರಿಟೇಜ್, ಹೋಟೆಲ್ ಪೋಲಾ ಪ್ಯಾರಡೈಸ್, ರಾಯಲ್ ಆರ್ಕಿಡ್, ಶಿವಲೀಲಾ ಪ್ಯಾಲೇಸ್ ಹೋಟೆಲ್‍ಗಳಲ್ಲಿ ಉದ್ಯೋಗವಕಾಶ ಲಭಿಸಿವೆ ಎಂದರು.

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಇದೇ ವೇಳೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಸೋಮಶೇಖರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್. ಹಟ್ಟಪ್ಪ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಮಹಾರುದ್ರಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಹಾಗೂ ಚೇಂಬರ್ ಆಫ್ ಸ್ಕಿಲ್ ಡೆವಲಪ್‍ಮೆಂಟ್ ಸೆಂಟರ್‌ನ ಚೇರ್‍ಮನ್ ಯಶವಂತರಾಜ್ ನಾಗಿರೆಡ್ಡಿ ಸೇರಿದಂತೆ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚೇಂಬರ್ ಆಫ್ ಕಾಮರ್ಸ್ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.