ಸಾರಾಂಶ
ಕನಕದಾಸ ಜಯಂತಿ । ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಣೆ
ಕನ್ನಡಪ್ರಭ ವಾರ್ತೆ ಆಲೂರುಕನ್ನಡ ಸಾಹಿತ್ಯ ಕಂಡ ಶ್ರೇಷ್ಠ ಸಂತ ಸಾಹಿತಿಗಳಲ್ಲಿ ಕನಕದಾಸರೂ ಒಬ್ಬರು. ಭಾರತೀಯ ಸಂಗೀತ ಕ್ಷೇತ್ರದಲ್ಲಿ ಕನಕದಾಸರು ತಮ್ಮದೇಯಾದ ಅಳಿಸಲಾರದ ಹೆಜ್ಜೆಗಳನ್ನು ಮೂಡಿಸಿದ್ದಾರೆ. ತಳಸಮುದಾಯಗಳ ತಲ್ಲಣಗಳನ್ನು ತಮ್ಮ ಸಾಹಿತ್ಯದ ಮುಖೇನ ಕಟ್ಟಿಕೊಡುತ್ತ ಆದರ್ಶಮಯ ಬದುಕಿಗೆ ಬೆಳಕಾದರು ಎಂದು ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು.
ತಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಧ್ಯಕಾಲೀನ ಭಾರತದ ೧೪-೧೫ ನೇ ಶತಮಾನದಲ್ಲಿ ಶೂದ್ರ ಪಂಗಡದಲ್ಲಿ ಹುಟ್ಟಿ ತಮ್ಮ ಅದಮ್ಯ ಸಾಧನೆಯ ಮೂಲಕವೇ ಉಚ್ಚ ವರ್ಗವನ್ನು ಮೀರಿ ಬೆಳೆದ ಮೇರು ಪ್ರತಿಭೆ ಕನಕದಾಸರು. ಸಾಮಾಜಿಕ ವ್ಯವಸ್ಥೆಯ ಅಂದಿನ ಸೂಕ್ಷ್ಮತೆಗಳನ್ನು ತಮ್ಮ ಬರವಣಿಗೆಯ ಮೂಲಕ ತಿಳಿಸಿದ್ದಾರೆ. ಇವರ ರಾಮಧಾನ್ಯ ಚರಿತೆ ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿದ್ದು ೧೫೬ ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರ ಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತುಪಡಿಸಿ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂದು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ತಪ್ಪಾಗಲಾರದು ಎಂದು ಹೇಳಿದರು.ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು ೩೧೬ ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರ ಅವರ ಐದು ಮುಖ್ಯ ಕಾವ್ಯಕೃತಿಗಳಾಗಿವೆ ಎಂದರು.
ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. ೧೫ - ೧೬ ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತರು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರು ೩೧೬ ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ’ ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ‘ಎಲ್ಲಿ ನೋಡಿದರಲ್ಲಿ ರಾಮ’ ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡರು ಎಂದು ವಿವರಿಸಿದರು.ಕಾರ್ಯಕ್ರಮವನ್ನು ಹಿರಿಯ ಶಿಕ್ಷಕಿ ವಿ.ರವಿತ, ಅತಿಥಿ ಶಿಕ್ಷಕಿ ಎ.ಎಸ್.ರೇಖಾ ನಡೆಸಿಕೊಟ್ಟರು. ಪೋಷಕರು, ಮಕ್ಕಳು ಹಾಜರಿದ್ದರು.