ಜೂ. 30ರಿಂದ ಜು. 29ರ ವರೆಗೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್ಒ) ಮನೆ- ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ರೋಣ: ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಇಒ ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.ಪಟ್ಟಣದಲ್ಲಿ ಶುಕ್ರವಾರ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್- 2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜೂ. 30ರಿಂದ ಜು. 29ರ ವರೆಗೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್ಒ) ಮನೆ- ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಬಿಎಲ್ಒಗಳಿಗೆ ಅಗತ್ಯ ದಾಖಲೆಗಳು ಹಾಗೂ ನಿಖರ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದರು.ಪಟ್ಟಣದ ಸಿದ್ಧಾರೂಢ ದೇವಸ್ಥಾನದ ಆವರಣದಿಂದ ಆರಂಭವಾದ ಜಾಗೃತಿ ರ‍್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಸ್ವೀಪ್ ಸಮಿತಿಯ ಸದಸ್ಯರು ಭಾಗವಹಿಸಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರ ಗಮನ ಸೆಳೆದರು. ಬಳಿಕ ಪೋತರಾಜನ ಕಟ್ಟಿ ಬಳಿ ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವವನ್ನು ಸಾರಿದರು.ಈ ವೇಳೆ ತಾಪಂ ಸಹಾಯಕ ಲೆಕ್ಕಾಧಿಕಾರಿ ದೇವರಾಜ ಸಜ್ಜನಶೆಟ್ಟರ, ಸಿ.ಎಸ್. ನೀಲಗುಂದ, ದಯಾನಂದ ಯಾವಗಲ್, ಎಂ.ಎ. ಫಣಿಬಂಧ ಸೇರಿದಂತೆ ಇತರರು ಇದ್ದರು.ಬೈಕ್ ರ್ಯಾಲಿ, ಮಾನವ ಸರಪಳಿ

ನರಗುಂದ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಪಂ, ತಾಲೂಕು ಆಡಳಿತ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.ಪಟ್ಟಣದ ಉಡುಚಾ ಪರಮೇಶ್ವರಿ ದೇವಸ್ಥಾನದಿಂದ ಆರಂಭವಾದ ಬೈಕ್ ರ್ಯಾಲಿಯು ದಂಡಾಪುರ ರಸ್ತೆ, ಮುಖ್ಯ ಮಾರುಕಟ್ಟೆ ರಸ್ತೆ, ಗಾಂಧಿ ಚೌಕ್ ಹಾಗೂ ಬಸವೇಶ್ವರ ಸರ್ಕಲ್ ಮೂಲಕ ಸಂಚರಿಸಿ, ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಶಿವಾಜಿ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಸಮಾರೋಪಗೊಂಡಿತು.ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, ಪುರಸಭೆ ಮುಖ್ಯಾಧಿಕಾರಿ ಸುಭಾಸ ಕುದಾನಪುರ, ಸಂತೋಷಕುಮಾರ ಪಾಟೀಲ, ಕೃಷ್ಣಮ್ಮ ಹಾದಿಮನಿ, ಸಂಗಮೇಶ ಬ್ಯಾಳಿ, ಮಲ್ಲಿಕಾರ್ಜುನ ಹಿರೇಮಠ ಸೇರಿದಂತೆ ಇತರರು ಇದ್ದರು.