ಧಾರವಾಡ ಜಿಲ್ಲಾಧಿಕಾರಿ ಭವನದಲ್ಲಿರುವ ಖಾದಿ ಗ್ರಾಮೋದ್ಯೋಗ ಕಚೇರಿಯ ಮೆಟ್ಟಿಲುಗಳ ಮೇಲೆ ಇಲಾಖೆ ನೌಕರ ಶಿವಪ್ರಸಾದ ಪಾಟೀಲ್ (32) ಕೈಗೆ ಚಾಕು ಇರಿದುಕೊಂಡು ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಧಾರವಾಡ:

ಜಿಲ್ಲಾಧಿಕಾರಿ ಕಚೇರಿಯಲ್ಲೇ ಖಾದಿ ಗ್ರಾಮೋದ್ಯೋಗ ಇಲಾಖೆಯ ನೌಕರನೊಬ್ಬ ಕೈಗೆ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.

ಖಾದಿ ಗ್ರಾಮೋದ್ಯೋಗ ಇಲಾಖೆಯ ನೌಕರ ಶಿವಪ್ರಸಾದ ಪಾಟೀಲ್ (32) ಆತ್ಮಹತ್ಯೆಗೆ ಯತ್ನಿಸಿದ ನೌಕರ.

ಧಾರವಾಡ ಜಿಲ್ಲಾಧಿಕಾರಿ ಭವನದಲ್ಲಿರುವ ಖಾದಿ ಗ್ರಾಮೋದ್ಯೋಗ ಕಚೇರಿಯ ಮೆಟ್ಟಿಲುಗಳ ಮೇಲೆ ಕೈಗೆ ಚಾಕು ಇರಿದುಕೊಂಡು ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಇಲಾಖೆಯ ಮೇಲಾಧಿಕಾರಿಯೊಬ್ಬರು ಶಿವಪ್ರಸಾದ ಅವರನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಹೊಯ್ಸಳ ವಾಹನದಲ್ಲಿ ಶಿವಪ್ರಸಾದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲದ ಹೊರೆ, ಮಳೆ ಕೊರತೆಯಿಂದ ನೊಂದ ರೈತನೊಬ್ಬ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕಬ್ಬೇನೂರ ಗ್ರಾಮದಲ್ಲಿ ನಡೆದಿದೆ.ಬಸವರಾಜ ಮತವಾಡ (28) ಆತ್ಮಹತ್ಯೆ ಮಾಡಿಕೊಂಡ ರೈತ.ಸುಮಾರು 40 ಎಕರೆ ಜಮೀನನ್ನು ಲೀಜ್‌ಗೆ ಪಡೆದು ಉದ್ದು ಬೆಳೆದಿದ್ದ ಅವರು, ಮಳೆ ಕೊರತೆಯಿಂದ ಫಸಲು ಬಾರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕ ಸೇರಿದಂತೆ ಕೃಷಿ ಚಟುವಟಿಕೆಗಳಿಗಾಗಿ ಸುಮಾರು ₹15 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಫಸಲು ಬಾರದ ಹಿನ್ನೆಲೆಯಲ್ಲಿ ಮಾಡಿದ ಸಾಲವನ್ನು ಹೇಗೆ ತೀರಿಸುವುದು ಎಂಬ ಆತಂಕದಲ್ಲಿದ್ದ ಬಸವರಾಜ, ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಕಬ್ಬೇನೂರ ಗ್ರಾಮದಲ್ಲಿ ಕಳೆದ ಎರಡು ತಿಂಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.