ಉದ್ಯೋಗ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ಪ್ರತಿಭಾವಂತ ಯುವ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತರನ್ನು ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಎಂದು ಗುರುತಿಸಲಾಗಿದೆ.

ಕುಂದಾಪುರ: ಉದ್ಯೋಗ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ಪ್ರತಿಭಾವಂತ ಯುವ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತರನ್ನು ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಎಂದು ಗುರುತಿಸಲಾಗಿದೆ.

ಅಕ್ಷಯ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು. ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ ಅವರು, ತಿಂಗಳಿಗೊಮ್ಮೆ ಕಚೇರಿಗೆ ಭೇಟಿ ನೀಡುವ ಉದ್ದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದರು.ಭಾನುವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಚುಂಗಿಗುಡ್ಡೆಯಲ್ಲಿರುವ ಮನೆಯಿಂದ ಬೈಕ್‌ನಲ್ಲಿ ಬೆಂಗಳೂರಿನತ್ತ ಪ್ರಯಾಣ ಆರಂಭಿಸಿದ್ದ ಅಕ್ಷಯ್, ಪ್ರಯಾಣದ ನಡುವೆ ಅಪಘಾತ ಸಂಭವಿಸುವುದಕ್ಕೂ ಮುನ್ನ ತಾಯಿಗೆ ದೂರವಾಣಿ ಕರೆ ಮಾಡಿದ್ದರು ಎನ್ನಲಾಗಿದೆ. ಚನ್ನರಾಯಪಟ್ಟಣ ಸಮೀಪ ಟ್ರಕ್‌ಗೆ ಬೈಕ್‌ನ ಹ್ಯಾಂಡಲ್‌ನ ಭಾಗ ತಾಗಿ, ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಆದರೆ ಅಪಘಾತದ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಖಚಿತವಾಗಬೇಕಿದೆ.ತಾಯಿಯೊಂದಿಗೆ ನಿತ್ಯ ವಾಕಿಂಗ್!:ಅಕ್ಷಯ್ ಸೌಮ್ಯ ಸ್ವಭಾವದ ಯುವಕನಾಗಿದ್ದು, ಕುಟುಂಬದವರೊಂದಿಗೆ ಅತ್ಯಂತ ಆತ್ಮೀಯತೆ ಹೊಂದಿದ್ದರು. ಪ್ರತಿದಿನ ಸಂಜೆ ತಾಯಿಯೊಂದಿಗೆ ಚುಂಗಿಗುಡ್ಡೆ ರಸ್ತೆಯಲ್ಲಿ ವಾಕಿಂಗ್ ಮಾಡುವುದು ಅವರ ದಿನಚರಿಯ ಭಾಗವಾಗಿತ್ತು. ತಂದೆ-ತಾಯಿಯ ಏಕೈಕ ಮಗನಾಗಿದ್ದ ಅಕ್ಷಯ್ ಕುಟುಂಬದ ಬಹುದೊಡ್ಡ ಭರವಸೆಯಾಗಿದ್ದರು.ಅವರ ತಂದೆ ನಾರಾಯಣ ಹೆಬ್ಬಾರ್ ಎಲ್‌ಐಸಿ ಏಜೆಂಟ್ ಆಗಿದ್ದು, ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ತಾಯಿ ಗೃಹಿಣಿಯಾಗಿದ್ದಾರೆ. ಉದ್ಯೋಗ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಮಗನ ಸಾವಿನ ಸುದ್ದಿ ಕುಟುಂಬಸ್ಥರಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ.