ಸಾರಾಂಶ
ಕನ್ನಡಪ್ರಭ ವಾರ್ತೆ ಔರಾದ್
ಮಕ್ಕಳನ್ನು ಪೋಷಿಸಿ, ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಎರಡನೇ ತಾಯಿಯ ರೂಪದಲ್ಲಿ ಕೆಲಸ ಮಾಡುತ್ತವೆ ಎಂದು ಔರಾದ್(ಬಿ) ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂತಪೂರ ವತಿಯಿಂದ ಔರಾದ್ (ಬಿ) ಪಟ್ಟಣದ ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜರುಗಿದ ಪೋಷಣ್ ಅಭಿಯಾನ ಮಾಸಾಚರಣೆಯ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಸಂಸ್ಕಾರದ ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಅತ್ಯಂತ ಜವಾಬ್ದಾರಿಯುತವಾದದ್ದು. ಸರ್ಕಾರವು ಮಹಿಳೆಯರು ಮತ್ತು ಮಕ್ಕಳಿಗಾಗಿ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳ ಮುಖಾಂತರ ವಿತರಿಸುವುದರಿಂದ ಈ ಸೌಲಭ್ಯಗಳು ಎಲ್ಲ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು ಎಂದರು.ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಮರ್ಪಕ ಕುಡಿವ ನೀರು, ಶೌಚಾಲಯ, ಕಾಂಪೌಂಡ್ ಕಡ್ಡಾಯವಾಗಿ ಇರಬೇಕು. ಈ ದಿಶೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ಷೇತ್ರದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಮಾಡುವ ಪ್ರಯತ್ನಗಳು ನಡೆದಿವೆ. ಇದಕ್ಕೆ ಅಧಿಕಾರಿಗಳು ಸಹಕಾರ ಬೇಕು ಎಂದು ಹೇಳಿದರು.
ಪರಿಶ್ರಮ ವಹಿಸಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸಂಬಳ ಹೆಚ್ಚಿಸಬೇಕು ಎಂಬುದು ನನ್ನ ಅಭಿಲಾಶೆಯೂ ಆಗಿದೆ. ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ ಅವರು, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಪಡೆಯಲು ಪ್ರೇರೇಪಿಸಬೇಕು. ಯಾವುದೇ ರೀತಿಯ ಸಮಸ್ಯೆ ಎದುರಾದರೆ ನಿಮ್ಮ ಸಹಕಾರಕ್ಕೆ ನಾನು ಸದಾ ಸಿದ್ಧನಿದ್ದೇನೆ ಎಂದು ಅಭಯ ನೀಡಿದರು.ಸನ್ಮಾನ:
ಕಾರ್ಯಕ್ರಮದಲ್ಲಿ ಪ್ರಭು ಎಂಟರ್‌ಪ್ರೈಸಸ್ ವತಿಯಿಂದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ವಿಶೇಷ ಸನ್ಮಾನ ನಡೆಯಿತು. ಶಾಸಕರು ಎಲ್ಲರನ್ನು ಶಾಲು, ಹೂ ಹಾರಗಳೊಂದಿಗೆ ಗೌರವ ಕಾಣಿಕೆ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಔರಾದ(ಬಿ) ಪಟ್ಟಣ ಪಂಚಾಯತ ಅಧ್ಯಕ್ಷರಾದ ಸರುಬಾಯಿ ಘೂಳೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಕೆ.ಇಮಲಪಾ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಅಬ್ದುಲ್ ಖದೀರ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದ್ಮಾವತಿ ಸ್ವಾಮಿ, ಶಾರದಾ, ಭಾಗ್ಯವತಿ ಸೇರಿದಂತೆ ಔರಾದ್(ಬಿ) ಹಾಗೂ ಕಮಲಗರ ತಾಲೂಕಿನ ವಿವಿಧ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, 6 ತಿಂಗಳ ಮಕ್ಕಳಿಗೆ ಅನ್ನಪ್ರಾಶನ, ಸುಕನ್ಯಾ ಸಮೃದ್ಧಿ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಾಸ್‌ಬುಕ್ ವಿತರಣೆ, ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಕಾರ್ಯಕ್ರಮ ಜರುಗಿತು.