ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿಕನಿಷ್ಠ ವೇತನ, ಪಿಂಚಣಿ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡುತ್ತಿರುವ ಗೌರವಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಪ್ರಸ್ತುತ ಮಾಸಿಕ 11,500 ರು. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಮಾತನಾಡಿ, 2018ರಿಂದ ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ. ಸರ್ಕಾರ ಈ ಕೂಡಲೇ ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ನೌಕರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಭಾರತೀಯ ಕಾರ್ಮಿಕ ಸಮ್ಮೇಳನ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು. 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಣವನ್ನು ಅಂಗನವಾಡಿ ಕೇಂದ್ರದಲ್ಲಿಯೇ ನೀಡುವಂತೆ ಕಡ್ಡಾಯ ಕಾನೂನು ರೂಪಿಸಿಬೇಕು. ಎನ್‌ಇಪಿ ನಿಲ್ಲಿಸಬೇಕು. ಸುಧೀರ್ಘ ಅವಧಿಯಿಂದ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ, ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗೆ 31 ಸಾವಿರ ಕನಿಷ್ಠ ವೇತನ, ಕನಿಷ್ಠ 10 ಸಾವಿರ ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು, ಪೊನ್ನಂಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ, ಸೋಮವಾರಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ.ಬಿ.ಜಮುನ, ವಿರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಂ.ಬಿ.ಲೀಲಾವತಿ, ಪೊನ್ನಂಪೇಟೆ ತಾಲೂಕು ಸಂಘದ ಕಾರ್ಯದರ್ಶಿ ಬಿ.ಸಿ.ಲಲಿತಾಕ್ಷಿ ಹಾಗೂ ವಿರಾಜಪೇಟೆ ತಾಲೂಕು ಅಧ್ಯಕ್ಷೆ ಎ.ವಿ.ಶೀಲಾ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.