ಸಾರಾಂಶ
ಸಕಲೇಶಪುರ: ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸೀಮೆಂಟ್ ಮಂಜು ಹೇಳಿದರು. ಗುರುವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆಯರ ಕುಂದುಕೊರತೆ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಎಲ್ಲ ಸೇವೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣೆ ಕೆಲಸದಿಂದ ಹಿಡಿದು ಬಾಣಂತಿ, ಮಕ್ಕಳ ಆರೋಗ್ಯ ಸುಧಾರಣೆ ಜವಾಬ್ದಾರಿ ಹೊತ್ತಿರುವ ಕಾರ್ಯಕರ್ತೆಯರು, ತಮ್ಮ ಸಾರ್ಮಥ್ಯಕ್ಕಿಂತ ಹೆಚ್ಚಿನ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತೆಯರ ಸೇವಾ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲಿದ್ದೇನೆ. ಕಾಯಕರ್ತೆಯರಿಗೆ ತರಬೇತಿ ಹಾಗೂ ವೇತನ ಹೆಚ್ಚಳ ಹಾಗೂ ಅವರ ಬೇಡಿಕೆ ಪಟ್ಟಿಯಲ್ಲಿರುವ ಇತರೆ ಕೆಲಸಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕ ಧರಣಿಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಪುಷ್ಪ, ಇಒ ಗಂಗಾಧರ್, ಶಿಶು ಯೋಜನಾಧಿಕಾರಿ ದಿನೇಶ್ ಸೇರಿ ಹಲವರು ಉಪಸ್ಥಿತರಿದ್ದರು.