ಸಾರಾಂಶ
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಅಂಗನವಾಡಿ ನೌಕರರನ್ನು ನೇಮಿಸಿಕೊಳ್ಳುವುದಕ್ಕೆ ಎಐಟಿಯುಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಸಮೀಕ್ಷೆ ನಡೆಸುವುದಕ್ಕೂ ಮುನ್ನ ಸರ್ಕಾರ ಅಂಗನವಾಡಿ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿಲ್ಲ. ಮತ್ತೊಂದೆಡೆ, ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಲು ಹೋದಾಗ ಮಕ್ಕಳಿಗೆ ಏನಾದರೂ ಅನಾಹುತವಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಅಂಗನವಾಡಿ ನೌಕರರಿಗೆ ಭರವಸೆ ನಿಡಿದ್ದ ಗೌರವ ಧನ ಹೆಚ್ಚಳದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಬೇಕು. ಸಮೀಕ್ಷೆ ನಡೆಸಲೇಬೇಕು, ತರಬೇತಿ ಪಡೆಯಲೇಬೇಕೆಂದು ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸಮೀಕ್ಷೆ ನಡೆಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳು ಕಾರ್ಯಕರ್ತೆಯರಿಗೆ ಬೆದರಿಕೆ ಹಾಕುತ್ತಿದ್ದು, ಇದು ಮಾನಸಿಕ ದೌರ್ಜನ್ಯವಾಗಿದೆ. ಸರ್ವೇ ಮತ್ತಿತರ ಕಾರ್ಯಗಳಿಗೆ ಕಾರ್ಯಕರ್ತೆಯರನ್ನು ಬಳಸಿಕೊಳ್ಳುವುದು ಶೋಷಣೆಯ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಭೆ ನಡೆಸದೆ ನಿರ್ಲಕ್ಷ್ಯ:ಈ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದರೆ ಅಥವಾ ಕಾರ್ಯಕ್ರಮವಿದ್ದಾಗ ಅಂಗನವಾಡಿ ಸಂಘಟನೆಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸಂಘಟನೆಗಳನ್ನು ನಿರ್ಲಕ್ಷಿಸಿ ಏಕಪಕ್ಷೀಯವಾಗಿ ನಿರ್ಧರಿಸಿ ಕಾರ್ಯಕರ್ತೆಯರ ಮೇಲೆ ಅದನ್ನು ಹೇರಲಾಗುತ್ತಿದೆ. ಕೂಡಲೇ ಅಧಿಕಾರಿಗಳು ಸಭೆ ನಡೆಸದಿದ್ದರೆ ಚಳವಳಿಯ ದಾರಿ ಹಿಡಿಯುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.