ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಲವು ವರ್ಷಗಳಿಂದ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಯೂನಿಯನ್ ನೇತೃತ್ವದಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

ಹಾವೇರಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹಲವು ವರ್ಷಗಳಿಂದ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಯೂನಿಯನ್ ನೇತೃತ್ವದಲ್ಲಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.

ಈ ವೇಳೆ ಯೂನಿಯನ್ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ಅವರ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯ. ಏ.11ರ ಕೆಡಿಪಿ ಸಭೆಯಲ್ಲಿ ಆಗಿನ ಸಚಿವರಾದ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಸೂಚಿಸಿದ್ದರು. ಬಳಿಕವೂ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸರ್ಕಾರದ ಗಮನ ಸೆಳೆಯಲು ಅಹೋರಾತ್ರಿ ಧರಣಿ ಆರಂಭಿಸಿದ್ದೇವೆ. ಕೇವಲ ಭರವಸೆ ನೀಡದೆ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಹೆಚ್ಚುವರಿ ಕೆಲಸದ ಹೊರೆ ಇಳಿಸಲು ಒತ್ತಾಯ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೇಲೆ ಮೂಲ ಕರ್ತವ್ಯಗಳ ಜತೆಗೆ ಚುನಾವಣೆ, ಸಮೀಕ್ಷೆ, ವಿವಿಧ ಇಲಾಖೆಗಳ ಮಾಹಿತಿ ಸಂಗ್ರಹ ಸೇರಿದಂತೆ ಹಲವು ಹೆಚ್ಚುವರಿ ಕೆಲಸಗಳನ್ನು ವಹಿಸಲಾಗುತ್ತಿದೆ. ಇದರಿಂದ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕರ್ತವ್ಯ ಹಾಗೂ ಅನಗತ್ಯ ಹೆಚ್ಚುವರಿ ಇಲಾಖಾ ಕೆಲಸಗಳಿಂದ ವಿನಾಯಿತಿ ನೀಡಿ, ಮೂಲ ಅಂಗನವಾಡಿ ಸೇವೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಲಾಯಿತು.

ಬಾಕಿ ಗೌರವಧನ ಬಿಡುಗಡೆಗೆ ಆಗ್ರಹ:2023ರ ಏ.1ರಿಂದ 2026ರ ಆ.31ರವರೆಗೆ ಬಾಕಿ ಇರುವ ಗೌರವಧನ ಹಾಗೂ ಇತರೆ ಹಣಕಾಸಿನ ಸೌಲಭ್ಯಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಸಭೆ, ತರಬೇತಿ ಹಾಗೂ ಅಧಿಕೃತ ಕಾರ್ಯಕ್ರಮಗಳಿಗೆ ಹಾಜರಾಗುವ ಸಂದರ್ಭದಲ್ಲಿ ನಿಯಮಾನುಸಾರ ದೊರೆಯಬೇಕಾದ ಪ್ರಯಾಣ ಭತ್ಯೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕರಾದ ಎ.ಎಸ್. ಪೀರಜಾದೆ, ಎಂ.ಜೆ. ಮುಲ್ಲಾ, ಹಾವೇರಿ ತಾಲೂಕಿನ ಪದಾಧಿಕಾರಿಗಳಾದ ಜ್ಯೋತಿ ಕುಲಕರ್ಣಿ, ಜಯಶ್ರೀ ದೇಸಳ್ಳಿ, ಸುವರ್ಣಾ ಹಾಸಲ್ಕರ್, ಶಿವಲೀಲಾ ಪಾಟೀಲ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು.