ಅಂಗನವಾಡಿ ಕಾರ್ಯಕರ್ತರ ಮುಷ್ಕರ ಅಂತ್ಯ

| Published : Jun 21 2024, 02:01 AM IST / Updated: Jun 21 2024, 08:01 AM IST

ಅಂಗನವಾಡಿ ಕಾರ್ಯಕರ್ತರ ಮುಷ್ಕರ ಅಂತ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ಯುಕೆಜಿ, ಎಲ್‌ಕೆಜಿ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಹೋರಾಟ ಅಂತ್ಯಗೊಂಡಿದೆ. ಸರ್ಕಾರ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

 ಬೆಂಗಳೂರು :  ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್‌ಕೆಜಿ, ಯುಕೆಜಿ ಆರಂಭದಿಂದ ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್‌ಕೆಜಿ, ಯುಕೆಜಿ‌ ಆರಂಭಿಸುವ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬುಧವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕೇಂದ್ರಗಳು ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು ಭರವಸೆ ನೀಡಿದರು.

ಈ ವೇಳೆ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ। ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಉಪಾಧ್ಯಕ್ಷೆ ಸುನಂದಾ, ಕಾರ್ಮಿಕ ಸಂಘಟನೆಗಳ ಮುಖಂಡ ಮೀನಾಕ್ಷಿ ಸುಂದರಂ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳೊಂದಿಗೆ ಸಭೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಹಿರಿಯ ಅಧಿಕಾರಿಗಳು, ಸಿಐಟಿಯು ರಾಜ್ಯ ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಭಾಗವಹಿಸಿದ್ದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಸಿಐಟಿಯು ಎಲ್‌ಕೆಜಿ, ಯುಕೆಜಿ ನಡೆಸುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿತು. ನಂತರ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಲ್‌.ಕೆ.ಅತೀಖ್‌ ಅವರ ನೇತೃತ್ವದಲ್ಲಿ ಸಭೆ ನಡೆಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಅಪಾಯವಾಗದಂತೆ ಒಟ್ಟಾಭಿಪ್ರಾಯಕ್ಕೆ ಬರಬೇಕು. ಈ ಸಂಬಂಧ ವರದಿಯನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಲು ನಿರ್ಧರಿಸಲಾಯಿತು.

ಸಭೆಯಲ್ಲಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸದ್ಯ ಹೋರಾಟವನ್ನು ಮುಂದೂಡಲಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷೆ ಎಸ್‌. ವರಲಕ್ಷ್ಮಿ ತಿಳಿಸಿದ್ದಾರೆ.