ಸಾರಾಂಶ
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಮತ್ತೊಬ್ಬ ಯುವತಿಯ ಕೊಲೆಯೇ ಸಾಕ್ಷಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೇಲಿಂದ ಮೇಲೆ ಇಂಥ ಘಟನೆಗಳು ನಡೆಯುತ್ತಿರುವುದು ವಿಷಾದಕರ. ಈಗಿನ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಪರಾಧ ಹಾಗೂ ಕೊಲೆ ಸುಲಿಗೆ ಮಾಡುವ ಪಾತಕಿಗಳಿಗೆ ಕಾನೂನಿನ, ಪೊಲೀಸರ ಭಯವೇ ಇಲ್ಲದಂತಾಗಿದೆ. ಭಂಡ ಧೈರ್ಯದಿಂದ ಈ ತರಹದ ಘಟನೆಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರ ಕೂಡಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಂಜಲಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ. ನೇಹಾ ಹಿರೇಮಠ ಹತ್ಯೆ ಮಾಸುವ ಮುನ್ನವೇ ಈ ಘಟನೆ ನಡೆದಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತ ಪ್ರಕರಣವಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.