ಶಿಗ್ಗಾಂವಿ ಪಟ್ಟಣದ ಆಂಜನೇಯ ದೇವಸ್ಥಾನದಲ್ಲಿ ನಡೆದ ಘಟನೆ ವಿಷಾದನೀಯವಾಗಿದ್ದು, ಘಟನೆಗೆ ಯಾವುದೇ ರೀತಿಯ ಪ್ರಚೋದನೆ ಅಥವಾ ಪೂರ್ವನಿಯೋಜಿತ ಉದ್ದೇಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ಶಿಗ್ಗಾಂವಿ: ಪಟ್ಟಣದ ಆಂಜನೇಯ ದೇವಸ್ಥಾನದಲ್ಲಿ ನಡೆದ ಘಟನೆ ವಿಷಾದನೀಯವಾಗಿದ್ದು, ಘಟನೆಗೆ ಯಾವುದೇ ರೀತಿಯ ಪ್ರಚೋದನೆ ಅಥವಾ ಪೂರ್ವನಿಯೋಜಿತ ಉದ್ದೇಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ಗುರುವಾರ ಸಂಜೆ ಶಿಗ್ಗಾಂವಿ ಪಟ್ಟಣದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯನ್ನು ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳುವುದಿಲ್ಲ. ಘಟನೆಗೆ ಸಂಬಂಧಿಸಿದ ವ್ಯಕ್ತಿಯ ವಿರುದ್ಧ ಈಗಾಗಲೇ ಜಿಲ್ಲಾಡಳಿತ ಹಾಗೂ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದ ವ್ಯಕ್ತಿಯ ಮಾನಸಿಕ ಸ್ಥಿತಿಯ ಕುರಿತು ಮಾತನಾಡಿದ ಸಚಿವರು, ಈ ಹಿಂದೆ ಹಾವೇರಿಯಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು. ಮಾನಸಿಕ ಅಸ್ವಸ್ಥನೊಬ್ಬ ಮಹಾತ್ಮ ಗಾಂಧೀಜಿ ಅವರ ಪುತ್ಥಳಿಗೆ ಹಾನಿ ಮಾಡಿದ್ದ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ನ್ಯಾಯಾಲಯದ ಸೂಚನೆಯಂತೆ ಆತನನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಿದರು.

ಈ ಘಟನೆಯನ್ನು ನಾವು ಯಾವುದೇ ಕಾರಣಕ್ಕೂ ಸಮರ್ಥಿಸುವುದಿಲ್ಲ. ಆದರೆ, ಇದನ್ನು ಅನಗತ್ಯವಾಗಿ ದೊಡ್ಡ ವಿಷಯವನ್ನಾಗಿ ಮಾಡಿ ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡಬಾರದು. ನಾವೆಲ್ಲರೂ ಸಮಾನತೆಯಿಂದ ಹಾಗೂ ಸಹೋದರತ್ವದಿಂದ ಮನುಷ್ಯರಾಗಿ ಬದುಕಬೇಕು ಎಂದು ಸಚಿವರು ಮನವಿ ಮಾಡಿದರು.

ಕಾನೂನು ಸುವ್ಯವಸ್ಥೆ ಬಗ್ಗೆ ಆರೋಪಕ್ಕೆ ಪ್ರತಿಕ್ರಿಯೆ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವ ಲಮಾಣಿ, ಒಬ್ಬ ಮಾನಸಿಕ ಅಸ್ವಸ್ಥ ವ್ಯಕ್ತಿ ಈ ರೀತಿಯ ಕೃತ್ಯ ಎಸಗಿದರೆ ಜಿಲ್ಲಾಡಳಿತ ಏನು ಮಾಡಲು ಸಾಧ್ಯ? ಸಚಿವರು ಪ್ರತಿಯೊಂದು ವ್ಯಕ್ತಿಯ ವರ್ತನೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಘಟನೆ ನಡೆದ ಕೂಡಲೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಕ್ರಮ ಚಟುವಟಿಕೆ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ಮಟ್ಕಾ, ಇಸ್ಪೀಟ್ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಾವು ಮೊದಲಿನಿಂದಲೂ ಇಂತಹ ಅಕ್ರಮ ಚಟುವಟಿಕೆ ವಿರುದ್ಧವಾಗಿದ್ದೇನೆ. ಯಾವುದೇ ಪ್ರದೇಶದಲ್ಲಿ ಇಂತಹ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬರಗಾಲ ಘೋಷಣೆ ವಿಚಾರ: ಬರಗಾಲ ಪೀಡಿತ ಪ್ರದೇಶಗಳ ಘೋಷಣೆಯಲ್ಲಿ ಹಾವೇರಿ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ರೈತರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಿಷಂಯದ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಲು ಬಿಜೆಪಿಯವರು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.

ಶಾಸಕ ಯಾಸೀರಖಾನ್ ಪಠಾಣ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉಪಸ್ಥಿತರಿದ್ದರು.