ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದ ಸ್ಥಾನಕ್ಕೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ಗುರುವಾರದಿಂದಲೇ ನೀತಿಸಂಹಿತೆ ಜಾರಿಗೊಂಡಿದ್ದು, ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.
ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 7ರಂದು ನಾಮಪತ್ರ ವಾಪಸ್‌ಗೆ ಕೊನೆದಿನ. ಅ.21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆ ವರೆಗೆ ಚುನಾವಣೆ ನಡೆಯಲಿದೆ. 24ರಂದು ಮತ ಎಣಿಕೆ ನಡೆಯಲಿದೆ. 28ರಂದು ಇಡೀ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದರು.ಅವಿಭಜಿತ ದ.ಕ.ದಲ್ಲಿ ಚುನಾವಣೆ:
ದ.ಕ. ಸ್ಥಳೀಯಾಡಳಿತ ಪ್ರಾಧಿಕಾರ ಕ್ಷೇತ್ರದ ವ್ಯಾಪ್ತಿಗೆ ದ.ಕ. ಮತ್ತು ಉಡುಪಿ ಜಿಲ್ಲೆ ಸೇರಿದೆ. ಹೀಗಾಗಿ ಈ ಉಪ ಚುನಾವಣೆಯಲ್ಲಿ ಎರಡು ಜಿಲ್ಲೆಗಳ ಸ್ಥಳೀಯಾಡಳಿತಗಳ ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು 392 ಮತಗಟ್ಟೆಗಳಿದ್ದು, 6,037 ಮಂದಿ ಮತದಾರರಿದ್ದಾರೆ. ದ.ಕ.ದಲ್ಲಿ 234 ಮತಗಟ್ಟೆ, 3,551 ಮತದಾರರು, ಉಡುಪಿಯಲ್ಲಿ 158 ಮತಗಟ್ಟೆ, 2,486 ಮತದಾರರು ಇದ್ದಾರೆ.ಈ ಉಪ ಚುನಾವಣೆಯಲ್ಲಿ ದ.ಕ.ದಲ್ಲಿ ಗ್ರಾಮ ಪಂಚಾಯ್ತಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿ 234 ಸ್ಥಳೀಯ ಸಂಸ್ಥೆಗಳಲ್ಲಿ 3,580 ಮಂದಿ ಇದ್ದಾರೆ. ಅವರಲ್ಲಿ 3,551 ಮಂದಿ ಪ್ರಸ್ತುತ ಸದಸ್ಯರಿದ್ದಾರೆ. 29 ಸ್ಥಾನಗಳು ಖಾಲಿ ಇವೆ. ಉಡುಪಿಯಲ್ಲಿ ಗ್ರಾಮ ಪಂಚಾಯ್ತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿ 158 ಸ್ಥಳೀಯ ಸಂಸ್ಥೆಗಳಲ್ಲಿ 2,490 ಮಂದಿಯಲ್ಲಿ ಪ್ರಸ್ತುತ 2,486 ಮಂದಿ ಇದ್ದಾರೆ. 4 ಸ್ಥಾನಗಳು ಖಾಲಿ ಇವೆ ಎಂದರು.
ಪ್ರಸಕ್ತ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಅಭಿವೃದ್ಧಿ ಪರ ಘೋಷಣೆ ಮಾಡುವಂತಿಲ್ಲ. ರಾಜ್ಯ ಮತ್ತು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ(ಎಂಸಿಎಂಸಿ) ಸಮಿತಿ ಕಾರ್ಯನಿರ್ವಹಿಸಲಿದೆ. ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಮಾದರಿಯಲ್ಲೇ ನಿಯಮಾವಳಿ ಈ ಉಪ ಚುನಾವಣೆಗೂ ಅನ್ವಯಿಸಲಿದೆ ಎಂದರು.ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ಸರ್ವೆಲೆನ್ಸ್ ತಂಡ, ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್ ಹೋರ್ಡಿಂಗ್‌ಗಳನ್ನು ಕೂಡಲೇ ತೆರವುಗೊಳಿಸಲಾಗುವುದು. ಸಹಾಯಕ ಚುನಾವಣಾಧಿಕಾರಿಗಳಾಗಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಗಳು ಇರುತ್ತಾರೆ ಎಂದರು.
ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್, ಜಿಲ್ಲಾ ಎಸ್ಪಿ ಯತೀಶ್, ಪಾಲಿಕೆ ಆಯುಕ್ತ ಆನಂದ್, ಸಹಾಯಕ ಆಯುಕ್ತ ಗಿರೀಶ್ ನಂದನ್ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))