ಮಾಲಂಬಿ: ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ

| Published : May 01 2024, 01:17 AM IST

ಸಾರಾಂಶ

ಪೂಜಾ ಮಹೋತ್ಸವದಲ್ಲಿ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡರು. ಸಮಿತಿ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಮಾಲಂಬಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ದೇವರು ಮತ್ತು ಶ್ರೀ ಕನ್ನಂಬಾಡಿ ಅಮ್ಮ ದೇವರ ವಾರ್ಷಿಕೋತ್ಸವ ಮಂಗಳವಾರ ಬೆಳಗ್ಗೆ ಸಂಪನ್ನಗೊಂಡಿತು.

ವಾರ್ಷಿಕ ಪೂಜಾ ಮಹೋತ್ಸವ ಅಂಗವಾಗಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಗ್ರಾಮದ ದೇವಸ್ಥಾನಗಳಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ 7 ಗಂಟೆಗೆ ದೇವಸ್ಥಾನಗಳಲ್ಲಿ ಆರತಿಯೊಂದಿಗೆ ದೇವರನ್ನು ಗಂಗಾಸ್ನಾನಕ್ಕೆ ವಾದ್ಯಗೋಷ್ಠಿ, ಕುಂಭ ಕಳಶ ಮೆರವಣಿಗೆಯೊಂದಿಗೆ ಕೊಂಡೊಯ್ಯಲಾಯಿತು. ನಂತರ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮತ್ತು ಶ್ರೀ ಬಸವಣ್ಣ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ರಾತ್ರಿಯಿಂದ ಮಂಗಳವಾರ ಬೆಳಗ್ಗೆ ವರೆಗೂ ದೇವರ ಉತ್ಸವ ನಡೆಸಲಾಯಿತು.

ಮಂಗಳವಾರ ಬೆಳಗ್ಗೆ 8.30ರಿಂದ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಕನ್ನಂಬಾಡಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾ ಮಂಗಳಾರತಿ, ಭಕ್ತರಿಗೆ ಪ್ರಸಾದ ವಿನಿಯೋಗದೊಂದಿಗೆ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಪೂಜಾ ಮಹೋತ್ಸವದಲ್ಲಿ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನ ಸಮಿತಿ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.