ಸಾರಾಂಶ
ಹುಬ್ಬಳ್ಳಿ: ಇಲ್ಲಿನ ಕಾಲೇಜಿನಲ್ಲಿ ಹಾಡಹಗಲೇ ಹತ್ಯೆಗೀಡಾದ ನೇಹಾ ಹಿರೇಮಠ ಪ್ರಕರಣ ಜನಮನದಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ!
ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಸಂತ್ರಸ್ತೆಯ ದೂರಿನ ಅನ್ವಯ ಇಲ್ಲಿನ ನವನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಈಶ್ವರನಗರದ ಸದ್ದಾಂಹುಸೇನ ಲಿಂಬುವಾಲೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಐಪಿಸಿ 376, 506, ಜಾತಿ ನಿಂದನೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶುಕ್ರವಾರ ಸಂಜೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದವು.
ಆಗಿದ್ದೇನು?:
ಸದ್ದಾಂಹುಸೇನ ಲಿಂಬುವಾಲೆ ಅಮರಗೋಳದ ಅಪ್ರಾಪ್ತ ಬಾಲಕಿ ಜತೆ ಸಲುಗೆ ಬೆಳೆಸಿದ್ದಾನೆ. ಪ್ರೀತಿಸುವಂತೆ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳೆದ ಮೂರ್‍ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿಯನ್ನು ವಿಚಾರಿಸಿದಾಗ ಸದ್ದಾಂಹುಸೇನ ಹೆದರಿಸಿ, ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ-ತಾಯಿ ದೂರು ದಾಖಲಿಸಿದ್ದಾರೆ.
ಠಾಣೆಗೆ ಮುತ್ತಿಗೆ:
ಅನ್ಯಕೋಮಿನ ಯುವಕ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಠಾಣೆ ಎದುರು ಜಮೆಯಾಗಿದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕೂಡಲೇ ಎಫ್‌ಐಆರ್ ದಾಖಲಿಸಬೇಕು ಎಂದು ಪಟ್ಟು ಹಿಡಿದರು. ಅಲ್ಲದೇ, ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಸರಿಸುಮಾರು 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ಮುಂದುವರಿಯಿತು.
ರಾಜ್ಯ ಸರ್ಕಾರ ತುಷ್ಟೀಕರಣ ಮಾಡುತ್ತಿದೆ. ಹೀಗಾಗಿ ಈ ರೀತಿಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರಾಜ್ಯ ಸರ್ಕಾರ ಇಂಥ ಆರೋಪಿಗಳಿಗೆ ಎನ್‌ಕೌಂಟರ್ ಮಾಡಬೇಕು. ಲವ್ ಜಿಹಾದ್ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲವೇ ಆರೋಪಿಯನ್ನು ನಮಗೆ ಒಪ್ಪಿಸಿ ಎಂದು ಆಗ್ರಹಿಸಿದರು
ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ಎಂ. ರಾಜೀವ್ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಹೀಗಾಗಿ ಪ್ರತಿಭಟನೆ ಹಿಂದಕ್ಕೆ ಪಡೆಯಿರಿ. ಕಾನೂನು ಪ್ರಕಾರ ಏನು ಶಿಕ್ಷೆಯಾಗಬೇಕು ಅದನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ಮಹಿಳೆಯರಿಗೆ ಲವ್ ಜಿಹಾದ್ ಭಾಗ್ಯ ಕರುಣಿಸಿದ ಕಾಂಗ್ರೆಸ್
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳೆಯರಿಗೆ ಲವ್ ಜಿಹಾದ್ ಭಾಗ್ಯ ಕರುಣಿಸಿದೆ ಎಂದು ವಿಧಾನಸಭಾ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು. ಪ್ರಹ್ಲಾದ ಜೋಶಿ ಪರ ಧಾರವಾಡದಲ್ಲಿ ಕರ್ನಾಟಕ ಕಾಲೇಜು ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಪ್ರಕರಣ ಇನ್ನೂ ಚರ್ಚೆಯಲ್ಲಿರುವಾಗಲೇ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನಿಂದ ಪರಿಶಿಷ್ಟ ವರ್ಗಕ್ಕೆ ಸೇರಿದ ಅಪ್ರಾಪ್ತೆ ಮೇಲೆ ದೌರ್ಜನ್ಯ ನಡೆದಿದೆ. ರಾಜ್ಯದ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ಕೊಡುವ ಭಾಗ್ಯ ಇದೆನಾ? ಎಂದು ಪ್ರಶ್ನಿಸಿದ ಬೆಲ್ಲದ, ಸುಳ್ಳು ಭರವಸೆ ನೀಡಿ ಮಹಿಳೆಯರ ದಿಕ್ಕು ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ನಂಬಿದರೆ ನಮ್ಮ ಹೆಣ್ಣು ಮಕ್ಕಳಿಗೆ ಬುರಕಾ ಪರಿಸ್ಥಿತಿ ಬಂದರೂ ಅಚ್ಚರಿ ಏನಿಲ್ಲ. ಹಿಂದುಳಿದ ವರ್ಗದ ಹೆಸರು ಹೇಳಿ ಮತ ಕೇಳುವ ಕಾಂಗ್ರೆಸ್ ಮತ್ತದೇ ಮುಸ್ಲಿಂ ಪರ ಕೆಲಸ ಮಾಡುತ್ತದೆ. ಆದ್ದರಿಂದ ಭಾರತೀಯ ಸಂಸ್ಕೃತಿ ಉಳಿಸಲು, ಮಹಿಳೆಯರಿಗೆ ರಕ್ಷಣೆ ನೀಡಲು ನರೇಂದ್ರ ಮೋದಿಯೇ ಬರಬೇಕಿದೆ ಎಂದರು.