ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ 33 ವರ್ಷದ ಬಾಣಂತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆರಿಗೆಯ ಬಳಿಕ ತೀವ್ರ ನೋವು ಕಾಣಿಸಿಕೊಂಡರೂ ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ. 2024ರಲ್ಲಿ ಸಹ ಮೂವರು ಬಾಣಂತಿಯರು ಮೃತಪಟ್ಟಿದ್ದು ಆಗ ಮೂವರನ್ನು ಅಮಾನತು ಮಾಡಲಾಗಿತ್ತು. ಈಗ ಮತ್ತೆ ಅಂತಹುದೇ ಘಟನೆ ಮರುಕಳಿಸಿದೆ.
ಕನ್ನಡಪ್ರಭ ವಾರ್ತೆ, ಪಾವಗಡ
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ 33 ವರ್ಷದ ಬಾಣಂತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆರಿಗೆಯ ಬಳಿಕ ತೀವ್ರ ನೋವು ಕಾಣಿಸಿಕೊಂಡರೂ ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ. 2024ರಲ್ಲಿ ಸಹ ಮೂವರು ಬಾಣಂತಿಯರು ಮೃತಪಟ್ಟಿದ್ದು ಆಗ ಮೂವರನ್ನು ಅಮಾನತು ಮಾಡಲಾಗಿತ್ತು. ಈಗ ಮತ್ತೆ ಅಂತಹುದೇ ಘಟನೆ ಮರುಕಳಿಸಿದೆ.ತಾಲೂಕಿನ ಅರಸೀಕೆರೆ ಗ್ರಾಮದ ಸುದಾ (33) ಮೃತಪಟ್ಟ ಮಹಿಳೆ. ನವೆಂಬರ್ 17ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ಸುದಾ ಅವರಿಗೆ ರಾತ್ರಿ ತೀವ್ರ ಎದೆನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದರೂ ಸರಿಯಾಗಿ ಸ್ಪಂದಿಸಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾತ್ರಿ ಸುಮಾರು 12.30ರ ವೇಳೆಗೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಚಂದ್ರಬಾವಿ ಬಳಿ ರಾತ್ರಿ ಸುಮಾರು 1.30ರ ವೇಳೆಗೆ ಸುದಾ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆರಿಗೆಯ ನಂತರ ತೀವ್ರ ನೋವು ಕಾಣಿಸಿಕೊಂಡಿದ್ದರೂ ಸಮರ್ಪಕ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ವ್ಯವಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.ಮೃತ ಸುಧಾ ಅವರು ಪತಿ ಏಕಾಂತೇಶ್ವರ ಹಾಗೂ ಎಂಟು ವರ್ಷದ ಪುತ್ರಿ ಉನ್ನತಿಯನ್ನು ಅಗಲಿದ್ದಾರೆ. ಎರಡನೇ ಹೆರಿಗೆಯಲ್ಲಿ ಜನಿಸಿರುವ ನವಜಾತ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಣಂತಿಯ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪತ್ತೆಹಚ್ಚಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
