ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ

| Published : Jan 07 2025, 12:15 AM IST

ಸಾರಾಂಶ

ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅವಧಿ ಮುಗಿದ ಆರು ತಿಂಗಳ ಒಳಗೆ ನಡೆಸಬೇಕೆಂಬ ನಿಯಮವಿದೆ. ಅಲ್ಲದೆ ಸುಪ್ರೀಂಕೋರ್ಟಿನ ಆದೇಶವೂ ಕೂಡ ಇದೆ. ಆದರೆ, ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಇವೆಲ್ಲವನ್ನು ಮೀರಿ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಟಿಕಿಸಿದರು.

ನಾವು ಈಗಾಗಲೇ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಮನವಿ ಸಲ್ಲಿಸಿದ್ದೇವೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ನೀಡಿಲ್ಲ ಎಂಬ ಉತ್ತರವನ್ನ ಆಯೋಗ ನೀಡಿದೆ. ಹಳೆಯ ಮೀಸಲಾತಿಯ ಪ್ರಕಾರವೇ ಚುನಾವಣೆ ನಡೆಸಬಹುದಲ್ಲ ಎಂಬ ಪ್ರಶ್ನೆಗೆ ಚುನಾವಣಾ ಆಯೋಗ ಶೀಘ್ರದಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆಯನ್ನು ನೀಡಿದೆ. ರಾಜ್ಯ ಸರ್ಕಾರವು ಕೂಡ ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಆಗ್ರಹಿಸಿದರು.ಕಳೆದ ವರ್ಷ ಆಗಸ್ಟ್ ೮ರಂದು ಚುನಾವಣಾ ಆಯೋಗ ಶಿವಮೊಗ್ಗ, ಮೈಸೂರು ಸೇರಿದಂತೆ ಹಲವು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ಸುದ್ದಿಗೋಷ್ಠಿ ಮಾಡಿ ತಿಳಿಸಿದರು. ಆದರೆ, ಇದುವರೆಗೂ ಚುನಾವಣೆಯನ್ನು ನಡೆಸಿಲ್ಲ ಎಂದು ದೂರಿದರು.

ಚುನಾವಣೆ ನಡೆಯದೇ ಇರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 18948 ಕೋಟಿ ಹಣ ವಾಪಸ್ ಹಾಕುವ ಸಾಧ್ಯತೆ ಇದೆ. ಒಂದೆಡೆ ರಾಜ್ಯ ಸರ್ಕಾರ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ದೂರುತ್ತಿದೆ. ಬಂದಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಆದ್ದರಿಂದ ಕೂಡಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸಿ ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಿದರು.ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಅವರು, ರಾಜ್ಯ ಸರ್ಕಾರ ಸುಪಾರಿ ಕಿಲ್ಲರ್ ಸರ್ಕಾರವಾಗಿದೆ. ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕರೇ ಸತ್ಯಹರಿಶ್ಚಂದ್ರನ ತುಂಡೇ ಆಗಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಡೆತ್‌ನೋಟ್‌ನಲ್ಲಿ ಬರೆದಿಟ್ಟವರ ವಿರುದ್ಧ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ. ಕೂಡಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ರಾಜ್ಯದಲ್ಲಿ ಬಾಣಂತಿಯರ ಸಾವು ನಿರಂತರವಾಗಿ ನಡೆಯುತ್ತಿದೆ. ನೂರಾರು ಮಕ್ಕಳು ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣವಾಗಿದೆ ಎಂದು ಟೀಕಿಸಿದರು.ಸುದ್ದಿಗೋಷ್ಠಿಯಲ್ಲಿ ಸೂಡಾ ಮಾಜಿ ಅಧ್ಯಕ್ಷರಾದ ನಾಗರಾಜ್, ಜ್ಞಾನೇಶ್ವರ್, ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ, ಮಂಜುನಾಥ್ ದೀನ್ ದಯಾಳ್ ಇತರರು ಉಪಸ್ಥಿತರಿದ್ದರು.