ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು ವ್ಯಸನದ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ ಸೂಚಿಸಿದರು.ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ ಮತ್ತಿತರ ಇಲಾಖೆಗಳ ಆಶ್ರಯದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ಶಾಲೆಗಳು ಹಾಗೂ ಜಿಲ್ಲಾ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿನಿಲಯಗಳು ಮತ್ತು ಕ್ರೈಸ್ಟ್ ಅಧೀನದ ವಸತಿ ಶಾಲೆಗಳ ಪ್ರಾಂಶುಪಾಲರು ಮತ್ತು ವಾರ್ಡನ್‌ಗಳಿಗೆ ಮಾದಕ ವಸ್ತು ವ್ಯಸನದ ದುಷ್ಪರಿಣಾಮಗಳು ಮತ್ತು ಪೋಕ್ಸೋ ಕಾಯ್ದೆ ಕುರಿತು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ಹಿಂದೆ ರ್‍ಯಾಗಿಂಗ್ ವಿರೋಧಿ ಸಮಿತಿಗಳನ್ನು ರಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿತ್ತು. ಈ ಬೆಳವಣಿಗೆ ಬಳಿಕ ರ್‍ಯಾಗಿಂಗ್ ಕಾಯ್ದೆ ರಚಿಸಿದ ಬಳಿಕ ಆ ಪಿಡುಗು ಸಂಪೂರ್ಣ ಕಡಿಮೆಯಾಗಿದೆ. ಅದೇ ರೀತಿ ಗೃಹ ಸಚಿವರ ನಿರ್ದೇಶನದ ಮೇರೆಗೆ ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಅರಿವು ಮೂಡಿಸಿ ಅವರನ್ನು ಸಂವೇದನಾಶೀಲರನ್ನಾಗಿ ಮಾಡಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.ಆ ಸಮಿತಿಯ ಸ್ವರೂಪದ ಬಗ್ಗೆ ಈಗಾಗಲೇ ತಮ್ಮ ಸಂಸ್ಥೆಗಳಿಗೆ ಕಳುಹಿಸಿರುವ ಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಅಲ್ಲಿನ ಪ್ರಾಚಾರ್ಯರು ಮುಖ್ಯಸ್ಥರಾಗಿರುತ್ತಾರೆ. ಇಬ್ಬರು ಬೋಧಕ ಸಿಬ್ಬಂದಿ ಸದಸ್ಯರಾಗಿರುತ್ತಾರೆ. ಇಬ್ಬರು ಹಿರಿಯ ವಿದ್ಯಾರ್ಥಿಗಳು ಇರುತ್ತಾರೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಸಂಬಂಧಿಸಿದಂತೆ 1992 ರಲ್ಲಿ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಕೈಗೊಂಡ ತೀರ್ಮಾನಕ್ಕೆ ಭಾರತ ಸಹಿ ಹಾಕಿದ್ದು, ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.18 ವರ್ಷದೊಳಗಿನ ಹೆಣ್ಣು ಹಾಗೂ ಗಂಡು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ ಪೋಕ್ಸೋ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. 2019 ರಲ್ಲಿ ಕಾಯ್ದೆ ತಿದ್ದುಪಡಿಯಾದ ಬಳಿಕ ಕಠಿಣ ಕಾನೂನು ಜಾರಿಗೆ ಬಂದಿತು. 16 ವರ್ಷದೊಳಗಿನ ಮಕ್ಕಳ ಮೇಲೆ ಅದರಲ್ಲೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲಿ ಅಷ್ಟಕ್ಕೂ ಕೃತ್ಯ ಎಸಗಿದವರು ಸಂಬಂಧಿಕರಾಗಿದ್ದರೆ ಮರಣ ದಂಡನೆ ವಿಧಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ವಕೀಲರ ಸಂಘದ ಅಧ್ಯಕ್ಷ ಸುಜೆಂದ್ರ, ಬಾಲ ನ್ಯಾಯ ಮಂಡಳಿ ಸದಸ್ಯ ಚಂದ್ರಶೇಖರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಬಿ.ಮಾಲತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಿ.ಸಂತೋಷ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಆರ್. ರಮೇಶ್ ಹಾಜರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಡಿ.ರೇವಣ್ಣ ವಂದಿಸಿದರು.