ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

| Published : May 22 2025, 11:54 PM IST

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿದ್ದಾರೆ. ಈ ಆದೇಶದ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರ ಬಡಜನರ ಆರೋಗ್ಯಕ್ಕೆ ಮರಣಶಾಸನ ಬರೆದು ಅವರ ಬದುಕನ್ನು ಮತ್ತಷ್ಟು ದುಸ್ತಿರಗೊಳಿಸಲು ಹೊರಟಿದೆ ಎಂದು ಅವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಕ್ಯಾ. ಚೌಟ, ದೇಶಾದ್ಯಂತ ಯಶಸ್ವಿ ಮಾದರಿಯಾಗಿ ಹೊರಹೊಮ್ಮಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಕಡಿಮೆ ವೆಚ್ಚದಲ್ಲಿ ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಔಷಧ ಒದಗಿಸುತ್ತಿವೆ. ಕರ್ನಾಟಕದಲ್ಲಿಯೂ ನೂರಾರು ಜನೌಷಧಿ ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಇಲಾಖೆಯು ಕುಂಟು ನೆಪ ಹೇಳಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 200ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ಮುಚ್ಚಿಸುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಈ ಕೇಂದ್ರಗಳು ಉದ್ಯೋಗ ಸೃಷ್ಟಿಯಲ್ಲೂ ಮಹತ್ವದ ಪಾತ್ರ ವಹಿಸಿವೆ. ಜನೌಷಧಿ ಕೇಂದ್ರಗಳನ್ನು ನಡೆಸುವ ಮೂಲಕ ಅನೇಕರು ಸ್ವಯಂ ಉದ್ಯೋಗಿಗಳಾಗಿದ್ದು, ಇತರರಿಗೂ ಕೆಲಸ ನೀಡುವ ಮೂಲಕ ಆರ್ಥಿಕತೆಗೆ ಕೊಡುಗೆ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರವು ನೂರಾರು ಕುಟುಂಬಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ. ಇದು ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನಿಲುವಿಗೆ ಸ್ಪಷ್ಟ ನಿದರ್ಶನ ಎಂದು ಆರೋಪಿಸಿದ್ದಾರೆ.

ಜನೌಷಧಿ ಕೇಂದ್ರಗಳು ಬಡವರ ಪಾಲಿನ ವರದಾನ. ಆದರೆ ಬಡವರ ಆರೋಗ್ಯದಲ್ಲೂ ರಾಜಕೀಯ ಮಾಡುವ ಈ ಭ್ರಷ್ಟ ಕರ್ನಾಟಕ ಕಾಂಗ್ರೆಸ್‌ ಕ್ಕೆ ಜನರೇ ಬುದ್ದಿ ಕಲಿಸುವ ದಿನ ದೂರವಿಲ್ಲ. ರಾಜ್ಯ ಸರ್ಕಾರವು ಕಾಣದ ಕೈಗಳ ಹಿತಾಸಕ್ತಿಗಾಗಿ ಈ ರೀತಿಯ ನಿರ್ಧಾರ ಕೈಗೊಂಡಿರುವುದು ಅನುಮಾನ ಮೂಡಿಸಿದೆ . ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕಾಂಗ್ರೆಸ್ ಸರ್ಕಾರದ ಈ ಬಡ ವಿರೋಧಿ ನಿರ್ಧಾರವನ್ನು ಬಲವಾಗಿ ವಿರೋಧಿಸುತ್ತೇವೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಈ ಆದೇಶ ತಕ್ಷಣವೇ ಹಿಂಪಡೆಯಬೇಕು ಎಂದು ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.