ಕನಕಪುರ: ದೇಶದ ಅಭಿವೃದ್ಧಿ, ಕೀರ್ತಿ ಪತಾಕೆ ಹಾರಿಸುವಲ್ಲಿ ಮುಂಚೂಣಿಯಲ್ಲಿರುವ ಮಹಿಳೆಯರಿಗೆ ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅವಕಾಶ ನೀಡದಿದ್ದಲ್ಲಿ ಇಂಡಿಯಾ ಮೈತ್ರಿಕೂಟದ ವಿರುದ್ಧ ದೇಶದ ನಾರಿಯರು ನಿರಂತರ ಹೋರಾಟ ಮುಂದುವರೆಸುವುದಾಗಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಹಿಳಾ ಮುಖಂಡರು ಎಚ್ಚರಿಕೆ ನೀಡಿದರು.
ನಗರದ ಚನ್ನಬಸಪ್ಪ ವೃತ್ತದ ಬಳಿ ಮಹಿಳಾ ಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ಹಾಗೂ ಇಂಡಿಯ ಮೈತ್ರಿಕೂಟದ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಬಿಜೆಪಿ ಮಹಿಳಾ ಮುಖಂಡರಾದ ಮಮತಾ ಹಾಗೂ ಪವಿತ್ರ, ನಮ್ಮ ದೇಶದ ಮಹಿಳೆಯರು ಅಡುಗೆ ಮನೆಗೆ ಸೀಮಿತವಲ್ಲ, ಇವರು ದೇಶದ ಸೈನಿಕ ಹುದ್ದೆ ಸೇರಿದಂತೆ ವಿವಿಧ ರಂಗಗಳಲ್ಲಿ ಪುರುಷರ ಸಮಾನವಾಗಿ ದುಡಿಯುತ್ತಿದ್ದಾರೆ. ಮಹಿಳಾ ಮಸೂದೆ ಅಂಗೀಕಾರವಾಗದಿದ್ದಲ್ಲಿ ದೇಶದ ಮಹಿಳೆಯರು ವಿರೋಧಿಗಳಿಗೆ ತಕ್ಕಪಾಠ ಕಲಿಸುತ್ತಾರೆ ಎಂದರು.ಮಹಿಳಾ ಮಸೂದೆಯ ಬಗ್ಗೆ ಇಂಡಿಯಾ ಒಕ್ಕೂಟದ ನಾಯಕರು ಸಲ್ಲದ ಅಪಪ್ರಚಾರ ಮಾಡುತ್ತಿದ್ದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಾ ದೇಶದ ಜನರಿಗೆ ತಪ್ಪು ಸಂದೇಶ ನೀಡುವ ಮೂಲಕ ರಾಷ್ಟ್ರ ಹಾಗೂ ಮಹಿಳಾ ವಿರೋಧಿ ಧೋರಣೆಯನ್ನು ಖಂಡಿಸಿ, ಮಹಿಳೆಯರ ಹಕ್ಕುಗಳನ್ನು ಕಸಿಯಲು ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ಈ ಬಗ್ಗೆ ತಾಲೂಕು ಹಾಗೂ ರಾಜ್ಯಾದ್ಯಂತ ಜಾಗೃತಿ ಮೂಡಿಸುವ ಕೆಲಸವನ್ನು ಮಹಿಳಾ ಮೋರ್ಚಾ ಸದಸ್ಯರು ಮಾಡಲಿದ್ದಾರೆ ಎಂದರು.
ಆರ್‌ಇಎಸ್ ಮುಂಭಾಗದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯರಸ್ತೆಯಲ್ಲಿ ಇಂಡಿಯಾ ಒಕ್ಕೂಟದ ವಿರುದ್ಧ ಘೋಷಣೆ ಕೂಗಿ ವೃತ್ತದ ಬಳಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿ ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ನಂತರ ತಾಲೂಕು ಕಚೇರಿಗೆ ತೆರಳಿ ಮಹಿಳಾ ಮೀಸಲಾತಿ ಮಸೂದೆ ಜಾರಿಗಾಗಿ ಒತ್ತಾಯಿಸಿ ಮನವಿ ಪತ್ರವನ್ನು ತಹಸೀಲ್ದಾರ್ ಸಂಜಯ್ ಅವರಿಗೆ ನೀಡಿದರು.ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಕೆ.ಪಿ.ಕುಮಾರ್, ನಗರಾಧ್ಯಕ್ಷ ಕೆ.ಆರ್.ಚಂದ್ರಶೇಖರ್, ಮಾಜಿ ಅಧ್ಯಕ್ಷ ಕೋಟೆ ಮಂಜುನಾಥ್, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗಾನಂದ, ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಅಶ್ವತ್ಥ್ ನಾರಾಯಣ, ಪ್ರಧಾನ ಕಾರ್ಯದರ್ಶಿ ಪಾಲಾಕ್ಷ, ಮುಖಂಡರುಗಳಾದ ಮರೀಗೌಡ, ರಾಜ್ಯಬಿಜೆಪಿ ಸದಸ್ಯೆ ತಹಸೀನಾ ಖಾನಂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೆ ಕೆ ಪಿ ಸುದ್ದಿ 01:
ಕನಕಪುರ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ವಿರುದ್ಧ ಪ್ರತಿಭಟನೆ ನಡೆಸಿದರು.