ಸಾರಾಂಶ
ಬಳ್ಳಾರಿ ಜಿಲ್ಲಾಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ ‘ವಿಶ್ವ ಮೆದುಳು ದಿನ ಆಚರಿಸಲಾಯಿತು.
ಕನ್ನಡಪ್ರಭವಾರ್ತೆ ಬಳ್ಳಾರಿ
ಮೆದುಳು ಮಾನವ ದೇಹದ ಬಹು ಮುಖ್ಯ ಅಂಗ. ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ಎಲ್ಲ ಕ್ರಿಯೆಗಳಿಗೆ ಇದು ಕಾರಣವಾಗಿದ್ದು, ಉತ್ತಮ ಸಮತೋಲಿತ ಆಹಾರ ಮತ್ತು ವ್ಯಾಯಾಮ, ಯೋಗ ಮೂಲಕ ಮೆದುಳಿನ ಆರೋಗ್ಯವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ ಏರ್ಪಡಿಸಿದ್ದ ‘ವಿಶ್ವ ಮೆದುಳು ದಿನಾಚರಣೆ’ ಕಾರ್ಯಕ್ರಮ ಮತ್ತು ನೂತನ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ದೇಹದ ಸಂಪೂರ್ಣ ಅಂಗಾಂಗಗಳಿಗೆ ಸಂದೇಶ ಹೋಗುವುದು ಮೆದುಳಿನಿಂದ. ಮೆದುಳಿನ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಆ ಕಾರಣಕ್ಕೆ ಮೆದುಳಿನ ಆರೋಗ್ಯ ಹಾಗೂ ನರ ವೈಜ್ಞಾನಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ವಿಶ್ವ ಮೆದುಳಿನ ದಿನವನ್ನು ಆಚರಿಸಲಾಗುತ್ತದೆ ಎಂದರು.
ಮೆದುಳಿನ ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಆದ್ಯತೆಯಾಗಬೇಕು. ಚಿಂತೆ, ಖಿನ್ನತೆ, ಒತ್ತಡ ನಿರ್ವಹಣೆಯತ್ತ ನಾವು ಹೆಚ್ಚು ಗಮನ ನೀಡಬೇಕು. ಮಾನಸಿಕ ಸ್ವಾಸ್ಥ ಕಾಪಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದಾರಿ ಮಾಡಿಕೊಡಬೇಕು. ಮೆದುಳಿನ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಜಾಗೃತಿ ನೀಡಬೇಕು ಎಂದು ಅವರು ತಿಳಿಸಿದರು.ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೆದುಳಿನ ಆರೋಗ್ಯವನ್ನು ಉತ್ತೇಜಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಮೆದುಳಿನ ಸಮಸ್ಯೆ ಹೊಂದಿರುವವರಿಗೆ ತಜ್ಞರ ಆರೈಕೆ, ಚಿಕಿತ್ಸೆ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಆರಂಭಗೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಮೆದುಳಿನ ಸಮಸ್ಯೆಗಳನ್ನು ತಪ್ಪಿಸಬಹುದು, ಚಿಕಿತ್ಸೆ ನೀಡಬಹುದು ಹಾಗೂ ಇದರಿಂದ ಚೇತರಿಸಿಕೊಳ್ಳಬಹುದು. 40 ವರ್ಷ ಮೇಲ್ಪಟ್ಟವರು ಪ್ರತಿ ಆರು ತಿಂಗಳಿಗೊಮ್ಮೆ ತಪ್ಪದೇ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಸ್ಥಾನಿಕ ವೈದ್ಯಾಧಿಕಾರಿ ಡಾ. ವಿಶ್ವನಾಥ ಕೆ., ಉಪಮುಖ್ಯಾಧಿಕಾರಿ ಡಾ. ಗುರುನಾಥ ಬಿ ಚವ್ಹಾಣ್, ಜನರಲ್ ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ. ಯೋಗಾನಂದ ರೆಡ್ಡಿ, ಮೆದುಳು ಆರೋಗ್ಯ ಚಿಕಿತ್ಸಾ ಕೇಂದ್ರದ ನರರೋಗ ತಜ್ಞ ಡಾ. ಕಮಲ್ ಕುಮಾರ್ ಜೈನ್, ನೋಡಲ್ ಅಧಿಕಾರಿ ಡಾ. ರಾಕೇಶ್ ಸೇರಿದಂತೆ ವೈದ್ಯಾಧಿಕಾರಿಗಳು, ಶುಶೂಷ್ರಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.