ಸಾರಾಂಶ
ಸಾರ್ವಜನಿಕರ ನಿರಾಸಕ್ತಿ: ಶಾಸಕ ಕೃಷ್ಣಪ್ಪ ಬೇಸರ
ಕನ್ನಡಪ್ರಭ ವಾರ್ತೆ ತುರುವೇಕೆರೆ
ದೇಶದ ರಾಷ್ಟ್ರೀಯ ಹಬ್ಬಗಳಾಗಿರುವ ಸ್ವಾತಂತ್ರ್ಯೋತ್ಸವ, ಗಣ ರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಸೇರಿದಂತೆ ವಿವಿಧ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಲು ಸಾರ್ವಜನಿಕರು ನಿರಾಸಕ್ತಿ ಹೊಂದಿದ್ದಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಪಾಠಶಾಲೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ೭೮ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆ ಕೇವಲ ವಿದ್ಯಾರ್ಥಿಗಳು ಮತ್ತು ಸರ್ಕಾರಿ ನೌಕರರಿಗೆ ಮಾತ್ರ ಸೀಮಿತ ಎಂಬ ಭಾವನೆ ಬಂದಿದೆ. ಸಾರ್ವಜನಿಕರಿಗೆ ಈ ದಿನಗಳ ಮಹತ್ವದ ಬಗ್ಗೆ ಆಸಕ್ತಿಯೇ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ಇದೇ ವೇಳೆ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಪಂಚಾಯಿತಿ ಇಒ ಶಿವರಾಜಯ್ಯ ಸಂವಿಧಾನ ಪೀಠಿಕೆ ವಾಚಿಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನಂರಾಜು ಮುನಿಯೂರು, ಶಿರಸ್ಥೇದಾರ್ ಬಿ.ಆರ್.ಸುನಿಲ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜು, ಉಪನ್ಯಾಸಕ ವಿಜಯಕುಮಾರ್ ಪಟ್ಟಣ ಪಂಚಾಯಿತಿ ಸದಸ್ಯರು, ತಾಲೂಕು ಪಟ್ಟದ ಅಧಿಕಾರಿಗಳು, ನೌಕರರು, ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು.ಪಟ್ಟಣದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.