ಸಾರಾಂಶ
ಡಿ.24 ರಂದು ಸಂಜೆ 4 ಗಂಟೆಗೆ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಬಯಲು ಆವರಣದಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಅವರ 90 ರ ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಕುಂದಾಪುರನಾಡಿನ ಹಿರಿಯ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ ಡಿ.24 ರಂದು 90 ವರ್ಷ ತುಂಬುತ್ತಿದ್ದು ಈ ಬಾರಿ ಅವರ ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನ ಅಪ್ಪಣ್ಣ ಹೆಗ್ಡೆ 90ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹುಟ್ಟುಹಬ್ಬದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಅಪ್ಪಣ್ಣ ಹೆಗ್ಡೆಯವರಿಗೆ ಆಸಕ್ತಿ ಇರುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ವರ್ಷಪೂರ್ತಿ ನಡೆಸಬೇಕು ಎನ್ನುವ ಉದ್ದೇಶದಿಂದ ಬೈಂದೂರಿನ ಕುಡೂರಿನಲ್ಲಿ ಎಲ್ಲೂರು ಕಂಬಳ ಹಾಗೂ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮೂಡುಬಿದಿರೆ ಆಳ್ವಾಸ್ ಸಾಂಸ್ಕೃತಿಕ ಲೋಕ -2024 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ, ದೇವವೃಕ್ಷ ಅಭಿಯಾನ, ಗ್ರಾಮೀಣ ಪ್ರದೇಶದಲ್ಲಿ ರಂಗ ಮಂಟಪ ನಿರ್ಮಾಣ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಸಂಘಟಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಆಳ್ವರು ತಿಳಿಸಿದರು. ಡಿ.24 ರಂದು ಸಂಜೆ 4 ಗಂಟೆಗೆ ವಕ್ವಾಡಿಯ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಬಯಲು ಆವರಣದಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಅವರ 90 ರ ಜನ್ಮ ದಿನೋತ್ಸವ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಜರ್ನಿ ಥಿಯೇಟರ್ ತಂಡದವರಿಂದ ‘ಬೇಲಿ ಮುಳ್ಳಿನ ನೀಲಿ ಹೂಗಳು’ ರಂಗ ಗೀತೆ ಹಾಗೂ ಜಾನಪದ ಗೀತೆಗಳು ಪ್ರಸ್ತುತಿ ನಡೆಯಲಿದೆ. ಬಳಿಕ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರುಗಳಿಂದ ಕೊಲ್ಲೂರು ಶ್ರೀ ಮೂಕಾಂಬಿಕೆ ನೃತ್ಯಗಾಥೆ ಹಾಗೂ ನೃತ್ಯಗಳನ್ನು ಒಳಗೊಂಡಿರುವ ಸಾಂಸ್ಕೃತಿಕ ರಸೋಲ್ಲಾಸ ನಡೆಯಲಿದೆ ಎಂದರು.ಸಂಜೆ 6.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ. ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಅವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಸಾಧಕ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು ಎಂದರು. ಗುರುಕುಲ ಪಬ್ಲಿಕ್ ಸ್ಕೂಲ್ ಜಂಟಿ ಕಾರ್ಯನಿರ್ವಾಹಕ ಟ್ರಸ್ಟಿ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ರಾಮ್‌ಕಿಶನ್ ಹೆಗ್ಡೆ, ಸಾಂಸ್ಕೃತಿಕ ಸಂಯೋಜಕ ಉದಯ್ ಪಡುಕರೆ ಇದ್ದರು. ಜನ್ಮದಿನೋತ್ಸವ ಸಮಿತಿಯ ವಸಂತ ಗಿಳಿಯಾರ್ ಸ್ವಾಗತಿಸಿದರು.