ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಸೋಮಯ್ಯಾ ಗಣಾಚಾರಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ 40ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಸೋಮಯ್ಯಾ ಗಣಾಚಾರಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ 40ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಶನಿವಾರ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ವೀರಶೈವ ಲಿಂಗಾಯತ ಜಂಗಮ ಸಮುದಾಯದ ಸೋಮಯ್ಯಾ ಗಣಾಚಾರಿ ಅವರು ಸಮುದಾಯದ ಕಾರ್ಯ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವುದರಿಂದ ಜಂಗಮ ಸಮುದಾಯಕ್ಕೆ ಕಾಂಗ್ರೆಸ್‌ನಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆತಂತಾಗುತ್ತದೆ ಎಂದು ಮಠಾಧೀಶರು ಮನವಿ ಮಾಡಿದರು.
ಈ ಕುರಿತು ಮಾತನಾಡಿದ ವಿಜಯಪುರ ಸಂಸ್ಥಾನ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿವಿಧ ಭಾಗಗಳ ಮಠಾಧೀಶರು ಸೇರಿ ಸೋಮಯ್ಯಾ ಗಣಾಚಾರಿ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.ಸೋಮಯ್ಯಾ ಗಣಾಚಾರಿ ಅವರು ರಂಭಾಪುರಿ ಶ್ರೀಗಳ ಶಿಷ್ಯರಾಗಿದ್ದು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಲವು ವರ್ಷಗಳಿಂದ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಧಾರ್ಮಿಕ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾಗಿರುವ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡಬೇಕೆಂಬುದು ಮಠಾಧೀಶರ ಒತ್ತಾಯವಾಗಿದೆ ಎಂದು ತಿಳಿಸಿದರು.
ಸರಡಗಿ ರೇವಣ್ಣಸಿದ್ದ ಶಿವಾಚಾರ್ಯ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ, ಕಡಕೋಳ ಮಡಿವಾಳೇಶ್ವರ ಮಠದ ರುದ್ರಮುನಿ ಶಿವಾಚಾರ್ಯ, ರುದ್ರಮುನೇಶ್ವರ ಮಠದ ಡಾ. ಚನ್ನಾರುದ್ರಮುನಿ ಶಿವಾಚಾರ್ಯ, ಶ್ರೀಗುರುಸಂಸ್ಥಾನದ ಚಂದ್ರಶೇಖರ ಶಿವಾಚಾರ್ಯ, ರಟಗಲ್ಲ ವಿರಕ್ತ ಮಠದ ನೀಲಕಂಠ ಮಹಾಸ್ವಾಮಿ, ಗುರುಲಿಂಗ ಶಿವಾಚಾರ್ಯ ಸೇರಿದಂತೆ ಹಲವು ಮಠಾಧೀಶರು ಉಪಸ್ಥಿತರಿದ್ದರು.