ಪ್ರಸ್ತುತ ಶಾಲಾ- ಕಾಲೇಜುಗಳಲ್ಲಿ ನಿರಂತರ ಜಾಗೃತಿ ಮೂಡಿಸುವ ಮೂಲಕ ನಮ್ಮ ಯುವಪೀಳಿಗೆಯನ್ನು ಸಂಪೂರ್ಣ ತಂಬಾಕು ಮುಕ್ತವನ್ನಾಗಿ ಮಾಡಲು ಸಾಧ್ಯ.
ಗದಗ: ತಂಬಾಕು ವ್ಯಸನದ ದುಷ್ಪರಿಣಾಮಗಳಿಂದ ಉಂಟಾಗುವ ರೋಗಗಳು ಹಾಗೂ ಸಾವುಗಳನ್ನು ನಿಯಂತ್ರಿಸಲು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಜಿಲ್ಲಾ ಎನ್‌ಸಿಡಿ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ಎಸ್‌ವಿಟಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಶ್ವ ತಂಬಾಕುರಹಿತ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಸ್ತುತ ಶಾಲಾ- ಕಾಲೇಜುಗಳಲ್ಲಿ ನಿರಂತರ ಜಾಗೃತಿ ಮೂಡಿಸುವ ಮೂಲಕ ನಮ್ಮ ಯುವಪೀಳಿಗೆಯನ್ನು ಸಂಪೂರ್ಣ ತಂಬಾಕು ಮುಕ್ತವನ್ನಾಗಿ ಮಾಡಲು ಸಾಧ್ಯ. ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾವನ್ನು ಇನ್ನಷ್ಟು ಪರಿಣಾಮಕಾರಿಯಾಗಲು ಕೆಲವು ಪ್ರಮುಖ ತಿದ್ದುಪಡಿಗಳ ಅವಶ್ಯಕತೆಯಿದೆ ಎಂದ ಅವರು, ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರೆಲ್ಲರೂ ಕೈಜೋಡಿಸಬೇಕು ಎಂದರು.
ಉಪನ್ಯಾಸ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೀತ್ ಖೋನಾ, ಪ್ರಸ್ತುತ ವರ್ಷದ ಧ್ಯೇಯವಾಕ್ಯದಂತೆ, ತಂಬಾಕು ಕಂಪನಿಗಳು ಆಕರ್ಷಕ ಪ್ಯಾಕೇಜಿಂಗ್, ವಿವಿಧ ಬಣ್ಣ ಹಾಗೂ ಸುವಾಸನೆ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಮೂಲಕ ಉತ್ಪನ್ನಗಳನ್ನು ಫ್ಯಾಶನ್ ಎಂಬಂತೆ ಬಿಂಬಿಸಿ ಯುವಕರನ್ನು ವ್ಯಸನಿಗಳನ್ನಾಗಿ ಮಾಡುತ್ತಿವೆ. ತಂಬಾಕಿನಲ್ಲಿರುವ ನಿಕೋಟಿನ್ ಅಂಶ ರಕ್ತನಾಳಗಳ ಮೂಲಕ ದೇಹದ ಪ್ರತಿಯೊಂದು ಅಂಗವನ್ನು ಸೇರಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ ಹಾಗೂ ಪಾರ್ಶ್ವವಾಯುವಿನಂಥ ಮಾರಣಾಂತಿಕ ರೋಗಗಳಿಗೆ ಕಾರಣವಾಗುತ್ತದೆ ಎಂದರು.ಡಿವೈಎಸ್ಪಿ ಎಂ.ಐ. ಸಜ್ಜನ ಮಾತನಾಡಿ, ಶಾಲಾ- ಕಾಲೇಜುಗಳ ಸುತ್ತಮುತ್ತಲ 100 ಅಡಿ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಅಥವಾ ಕಾಯ್ದೆ ಉಲ್ಲಂಘನೆಯಾದಲ್ಲಿ ತಕ್ಷಣ ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.
ಎಸ್‌ವಿಟಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯ ವಿನಯ ಕುಬಸದ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದು, ಇಲ್ಲಿ ಪಡೆದ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಕುಟುಂಬ, ಸ್ನೇಹಿತರು ಹಾಗೂ ಸಮುದಾಯದೊಂದಿಗೆ ಹಂಚಿಕೊಂಡು ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ, ಬಸಮ್ಮ ಚಿತ್ತರಗಿ, ರೇಷ್ಮಾ ನದಾಫ್, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪದ್ಮಾವತಿ, ಐ.ಡಿ.ಎಸ್.ಪಿ ಡಾಟಾ ಮ್ಯಾನೇಜರ್ ವೀರೇಶ್ ಮದಕಟ್ಟಿ, ಶಿವಕುಮಾರ್ ಬಗಾಡೆ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಎಂ. ರಬ್ಬನಗೌಡ ನಿರೂಪಿಸಿದರು.