ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ನೀತಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯವಾದ ಅನುದಾನ ಹಂಚಿಕೆ ಮತ್ತು ಆಡಳಿತಾತ್ಮಕ ಅನುಮೋದನೆಗಳನ್ನು ಒದಗಿಸುವ ಕುರಿತು ಕರಾವಳಿ ಅಭಿವೃದ್ಧಿ ಮಂಡಳಿ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ನೀತಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯವಾದ ಅನುದಾನ ಹಂಚಿಕೆ ಮತ್ತು ಆಡಳಿತಾತ್ಮಕ ಅನುಮೋದನೆಗಳನ್ನು ಒದಗಿಸುವ ಕುರಿತು ಕರಾವಳಿ ಅಭಿವೃದ್ಧಿ ಮಂಡಳಿ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು 2026-27ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕಾಯ್ದಿರಿಸುವಂತೆ ಮತ್ತು ಪ್ರಮುಖ ಯೋಜನೆಗಳಿಗೆ ತ್ವರಿತ ಆಡಳಿತಾತ್ಮಕ ಅನುಮೋದನೆ ನೀಡಬೇಕು ಎಂದು ಮನವಿ ಮಾಡಲಾಯಿತು. ಕರಾವಳಿ ನಿಯಂತ್ರಣ ವಲಯ ಸುಧಾರಣೆ, ಬಂದರು ಮತ್ತು ಮೀನುಗಾರಿಕೆ ಮೂಲಸೌಕರ್ಯ, ಸಮಗ್ರ ಬೀಚ್ ಅಭಿವೃದ್ಧಿ, ಜಲ ಸಾರಿಗೆ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ರಸ್ತೆ ಮತ್ತು ಸಂಪರ್ಕ ಅಭಿವೃದ್ಧಿ ಸೇರಿದಂತೆ ವಿವಿಧ ಪ್ರಮುಖ ವಿಷಯಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಮೂರು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನೋಡಲ್ ಏಜೆನ್ಸಿಯಾಗಿ ಬಲಪಡಿಸುವುದು, ಪ್ರಮುಖ ಯೋಜನೆಗಳಿಗೆ ಹಂತವಾರು ಅನುಷ್ಠಾನ ವೇಳಾಪಟ್ಟಿ ರೂಪಿಸುವುದು ಹಾಗೂ ಪ್ರತಿ ಕರಾವಳಿ ಜಿಲ್ಲೆಗೆ ವಿಶೇಷ ಅನುದಾನ ಪ್ಯಾಕೇಜ್ ಒದಗಿಸಬೇಕು ಎಂಬ ಶಿಫಾರಸುಗಳನ್ನೂ ಮನವಿಯಲ್ಲಿ ತಿಳಿಸಲಾಗಿದೆ.ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಸಚಿವ ರಮಾನಾಥ ರೈ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಕೆ.ಎಸ್.ಆರ್.ಟಿ.ಸಿ ಮಾಜಿ ನಿರ್ದೇಶಕ ಟಿ.ಕೆ. ಸುಧೀರ್ ಮತ್ತಿತರರು ಇದ್ದರು.