ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಇಡೀ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸುವಂತೆ ಕೋರಿ ಪ್ರಕರಣದ ಖಾಸಗಿ ದೂರುದಾರನಾಗಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಈ ಕುರಿತು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿರುವ ಸ್ನೇಹಮಯಿ ಕೃಷ್ಣ, ಅರ್ಜಿಯಲ್ಲಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯ, ರಾಜ್ಯ ಗೃಹ ಇಲಾಖೆ, ಸಿಬಿಐ, ಕರ್ನಾಟಕ ಲೋಕಾಯುಕ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮತ್ತಿತರರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿಯು ಸೋಮವಾರ ಹೈಕೋರ್ಟ್ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಅಕ್ರಮವಾಗಿ 55.80 ಕೋಟಿ ರು. ಮೌಲ್ಯದ ನಿವೇಶನಗಳನ್ನು ಪಡೆದಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಜರುಗಿಸುವಂತೆ ಕೋರಿ ಮೊದಲಿಗೆ ಮೈಸೂರು ವಿಜಯನಗರ ಠಾಣೆಗೆ ದೂರು ದಾಖಲಿಸಲಾಗಿತ್ತು. ಆದರೆ, ಪೊಲೀಸರು ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲು ನಿರಾಕರಿಸಿ ಸ್ವೀಕೃತಿ ಪತ್ರ ನೀಡಿದರು. ಇದರೊಂದಿಗೆ ಸಿಬಿಐ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳಿಗೆ ತನಿಖೆ ನಡೆಸಲು ಕೋರಿ ದೂರು ನೀಡಲಾಗಿತ್ತು. ಆ ದೂರಿನ ಆಧಾರದ ಮೇಲೆ ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಈ ನಡುವೆ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರಲ್ಲಿ ಕೋರಲಾಗಿತ್ತು. ಈ ಮನವಿ ಪುರಸ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್/ತನಿಖೆಗೆ ಆ.16ರಂದು ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಸೆ.24ರಂದು ವಜಾಗೊಳಿಸಿದ ಹೈಕೋರ್ಟ್, ರಾಜ್ಯಪಾಲರ ಆದೇಶ ಎತ್ತಿಹಿಡಿದಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಹೈಕೋರ್ಟ್ ಆದೇಶದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಿ ಆ.25ರಂದು ಆದೇಶಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.ಆದರೆ, ಸಿದ್ದರಾಮಯ್ಯ ಅವರು ರಾಜ್ಯದ ಹಾಲಿ ಮುಖ್ಯಮಂತ್ರಿಗಳು. ರಾಜ್ಯದ ಇಲಾಖೆಗಳ ಅದರಲ್ಲೂ ಮುಖ್ಯವಾಗಿ ಲೋಕಾಯುಕ್ತ ಮತ್ತು ಪೊಲೀಸ್ ಪ್ರಾಧಿಕಾರದಂತಹ ರಾಜ್ಯದ ತನಿಖಾ ಸಂಸ್ಥೆಗಳ ಮೇಲೆ ಭಾರೀ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ಇಂತಹ ಸಂಸ್ಥೆಗಳು ಮುಖ್ಯಮಂತ್ರಿಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿದರೆ, ಅದು ನಿಷ್ಪಕ್ಷಪಾತ ತನಿಖೆಯಾಗುವ ಸಾಧ್ಯತೆಯಿಲ್ಲ. ರಾಜ್ಯ ಸರ್ಕಾರದ ಮುಖ್ಯಸ್ಥ ಆಗಿರುವ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ರಾಜ್ಯದ ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಒಂದು ವೇಳೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರಿದರೆ ಅದರ ಫಲಿತಾಂಶವು ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತವಾಗಿರುವುದಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಆದ್ದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಲೋಕಾಯುಕ್ತ ಪೊಲೀಸರಿಗೆ ವಹಿಸಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು. ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಬೇಕು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನಾಮನಿರ್ದೇಶಿಸುವಂತಹ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯನ್ನು ನಡೆಸಲು ನಿರ್ದೇಶಿಸಬೇಕು. ರಾಜ್ಯಪಾಲರ ಆದೇಶ ಎತ್ತಿಹಿಡಿದು ಹೊರಡಿಸಿರುವ ತೀರ್ಪಿನಲ್ಲಿ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇರಿಸಿಕೊಂಡು ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.