ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ದೇಶ ಪೋಲಿಯೂ ಮುಕ್ತವಾಗಿದ್ದರೂ, ಭವಿಷ್ಯದ ದೃಷ್ಟಿಯಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಸರ್ಕಾರದ ಈ ಸೌಲಭ್ಯವನ್ನು ಪಾಲಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ, ನಗರಾಭಿವೃದ್ಧಿ ಅಧ್ಯಕ್ಷ ಎಚ್.ವೈ. ಮೇಟಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ, ನಗರದ 50 ಹಾಸಿಗೆಗಳ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದೇ ಒಂದು ಮಗು ಪೋಲಿಯೋಗೆ ಗುರಿಯಾದರೆ, ಆ ಮಗು ಜೀವನಪರ್ಯಂತ ನರಳುವಂತಾಗುತ್ತದೆ. ಈ ಕುರಿತು ಎಲ್ಲರಿಗೂ ತಿಳಿವಳಿಕೆ ನೀಡಬೇಕು. ಸರ್ಕಾರ ರೋಗಗಳು ಹರಡದಂತೆ ತೆಗೆದುಕೊಂಡ ಕ್ರಮಗಳಿಂದಲೇ ಇಂದು ದೇಶದಲ್ಲಿ ಮಲೇರಿಯಾ, ಟಿ.ಬಿ.ಯಂತಹ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಮಾ.6ರವರೆಗೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಯಾವುದೇ ಮಗು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಮಾತನಾಡಿ, ಹೋರಾಟದಿಂದಲೇ ಪೋಲಿಯೋ ಮುಕ್ತ ಭಾರತವಾಗಿದೆ. ಮೊದ ಮೊದಲು ಲಸಿಕೆ ಹಾಕಿಸಲು ಸಾಕಷ್ಟು ವಿರೋದ ವ್ಯಕ್ತವಾಗಿದೆ. ಕ್ರಮೇಣ ತಿಳಿವಳಿಕೆ ಮೂಡಿದಂತೆ ರೋಗ ನಿಯಂತ್ರಣಕ್ಕೆ ಬಂದಿರುತ್ತದೆ. ಈ ಕಾಯಿಲೆಯ ಸಂಪೂರ್ಣ ನಿರ್ಮೂಲನೆಗಾಗಿ ಪ್ರತಿಯೊಬ್ಬ ಪಾಲಕರು ಗಂಭೀರವಾಗಿ ಯೋಚಿಸಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶೋಕ ನೀಲವಾಣಿ ನಿರೂಪಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಬಾಗಲಕೋಟೆ ನೋಡಲ್ ಅಧಿಕಾರಿ ಡಾ.ಎ.ಎನ್. ದೇಸಾಯಿ , ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ತಾಲೂಕು ವೈದ್ಯಾಧಿಕಾರಿ ಸೇರಿದಂತೆ ಇತರರು ಇದ್ದರು.