ಸಾರಾಂಶ
ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ ೩,೦೦೦ ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ. ಬಳಿಕ ಬಹುತೇಕ ಸಮಸ್ಯೆಗಳು ಬಗೆಹರಿಯಲಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲ ಇದ್ದುದರಿಂದ ವಿದ್ಯುತ್ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ ೧೧ ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದೆ ಎಂದರು.ಪ್ರಸ್ತಕ ವರ್ಷ ೧೯ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರದಿಂದ ವಿದ್ಯುತ್ ಖರೀದಿಸಲಾಗಿದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್‌ಸೆಟ್ ಒದಗಿಸುವ ಕುಸುಮ್- ಬಿ ಯೋಜನೆಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ. ೫೦ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರ್ಕಾರ ಶೇ. ೩೦ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ. ೨೦ರಷ್ಟು ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ ಎಂದರು.
ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ನೆಗಳೂರಿನಲ್ಲಿ ೧೧೦ ಕೆವಿ ಸಾಮರ್ಥ್ಯದ ಸ್ಟೆಷನ್ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಅಧಿಕ ಒತ್ತಡದಿಂದ ಟ್ರಾನ್ಸ್‌ಫಾರ್ಮರ್‌ಗಳು ಸುಡುತ್ತಿವೆ. ಆದ್ದರಿಂದ ಅವುಗಳನ್ನು ಮೇಲ್ದರ್ಜೆಗೇರಿಸಬೇಕು. ಸುಟ್ಟ ಟ್ರಾನ್‌ಫಾರ್ಮರ್‌ಗಳನ್ನು ತುರ್ತಾಗಿ ಬದಲಿಸಬೇಕು ಎಂದು ಮನವಿ ಮಾಡಿದರು. ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಮಾತನಾಡಿ, ಕೃಷಿ ಪಂಪ್‌ಸೆಟ್‌ಗಳಿಗೆ ದಿನದ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು. ಕೆಲವು ಕಡೆ ಹಳೆಯದಾಗಿರುವ ವಿದ್ಯುತ್ ಲೈನ್‌ಗಳನ್ನು ಬದಲಿಸಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಬ್ಯಾಡಗಿ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಪ್ರಕಾಶ ಕೋಳಿವಾಡ, ಯಾಸಿರ್ ಅಹ್ಮದ್‌ಖಾನ್ ಪಠಾಣ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ: ಇಂಧನ ಸಚಿವ ಕೆ.ಜೆ. ಜಾರ್ಜ್
ಹಾವೇರಿ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ. ಬೇಸಿಗೆ ಸಮಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ೧೯,೫೦೦ ಮೆಗಾ ವ್ಯಾಟ್ ವಿದ್ಯುತ್‌ನ್ನು ಬೇರೆ ಬೇರೆ ರಾಜ್ಯಗಳಿಂದ ಖರೀದಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ವಿದ್ಯುತ್ ತಂತಿ ಬದಲಾವಣೆ: ಹಳೆ ವಿದ್ಯುತ್ ತಂತಿ ಬದಲಾವಣೆಗೆ, ಹೊಸ ಸ್ಟೇಷನ್ ಮಂಜೂರಾತಿಗೆ ಹಾಗೂ ಗ್ರಿಡ್ ಅಪ್‌ಗ್ರೇಡ್‌ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರ ಪಂಪಸೆಟ್‌ಗಳ ಅಕ್ರಮ- ಸಕ್ರಮಕ್ಕೆ ೪.೫೦ ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ ೨.೫೦ ಲಕ್ಷ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ಪುರಸಭೆ ಸೇರಿದಂತೆ ಸರ್ಕಾರಿ ಕಚೇರಿಗಳ ₹6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದರು.ಜಿಲ್ಲೆಯ ಜಿ.ಎಂ. ಶುಗರ್ಸ್‌ನವರು ಕೊಕ್ಕೆ ಹಾಕಿ ವಿದ್ಯುತ್ ಬಳಕೆ ಮಾಡಿದ ಕುರಿತು ದೂರು ಬಂದಿದ್ದು, ಇದನ್ನು ಪರಿಶೀಲಿಸಿ ವರದಿ ನೀಡಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಕೊಕ್ಕೆ ಹಾಕುವುದು ಸಾಮಾನ್ಯ. ಆದರೆ ಫ್ಯಾಕ್ಟರಿಯವರು ಹಾಕಿರುವುದು ಸರಿಯಾದ ಕ್ರಮವಲ್ಲ. ಅದು ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.ಮಾಧ್ಯಮಗೋಷ್ಠಿಯಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಇತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))