ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಶಾಲೆಗಳಲ್ಲಿ ಮಾನಸಿಕ ಒತ್ತಡ, ನಕಾರಾತ್ಮ ಭಾವನೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಪಟ್ಟಿ ಮಾಡಲು ಪ್ರತಿ ಶಾಲೆಯ ಒಬ್ಬ ಶಿಕ್ಷಕರನ್ನು ಆಪ್ತ ಸಮಾಲೋಚಕರಾಗಿ ನೇಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ಮತ್ತು ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲಿನ ಸಭೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಬಲಿಯಾಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಶೈಕ್ಷಣಿಕ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚಕರ ನೇಮಕ ಅಗತ್ಯವಿದೆ ಎಂದರು.ಸುಪ್ರೀಂ ಕೋರ್ಟ್ ಆದೇಶದಂತೆ ಪ್ರತಿ ಶಾಲೆಗಳಲ್ಲಿ ಮಾನಸಿಕ ಒತ್ತಡ ಹಾಗೂ ನಕಾರಾತ್ಮಕ ಭಾವನೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪಟ್ಟಿ ಮಾಡಿ ಪ್ರತಿ ಶಾಲೆಯ ಒಬ್ಬ ಶಿಕ್ಷಕರನ್ನು ಆಪ್ತ ಸಮಾಲೋಚಕರಾಗಿ ನೇಮಿಸಲಾಗುವುದು. ನೇಮಿಸಲಾದ ಶಿಕ್ಷಕರಿಗೆ ನುರಿತ ಮನೋವೈದ್ಯರಿಂದ ತರಬೇತಿ ಕೊಡಿಸಲಾಗುವುದು ಎಂದರು.
ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ 19 ಸ್ಥಾನ ಗಳಿಸಿತ್ತು. ಈ ವರ್ಷ ಜಿಲ್ಲೆ 12 ನೇ ಸ್ಥಾನ ಪಡೆದುಕೊಂಡಿದೆ. ಇದು ಶಿಕ್ಷಣ ಇಲಾಖೆಯ ಎಲ್ಲಾ ಸಿಬ್ಬಂದಿ, ಅಧಿಕಾರಿಗಳೂ ಹಾಗೂ ಶಾಲಾ ಶಿಕ್ಷಕರ ಪರಿಶ್ರಮದಿಂದ ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.ಮಾತೃ ಭಾಷೆ ಕನ್ನಡದಲ್ಲೇ ಸರಿಸುಮಾರು 3187 ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ಅತ್ಯಂತ ದುಃಖದ ಸಂಗತಿ. ವರದಿಯ ಪ್ರಕಾರ ಸರ್ಕಾರಿ ಶಾಲೆಗಳ ಫಲಿತಾಂಶಕ್ಕಿಂತ ಅನುದಾನಿತ ಶಾಲೆಗಳ ಫಲಿತಾಂಶ ಕಡಿಮೆ ಇದೆ. ಅನುದಾನಿತ ಶಾಲೆಗಳ ಕುರಿತು ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು. ಶಾಲೆಗಳ ಆಡಳಿತಾಧಿಕಾರಿಗಳ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.
ಶಾಲೆಗೆ ಬರುವ ಮಕ್ಕಳನ್ನು ಶಿಕ್ಷಕರು ತಮ್ಮ ಮಕ್ಕಳಂತೆ ಕಾಣಬೇಕು. ನಿಮ್ಮ ಮಕ್ಕಳ ಜೀವನ ರೂಪಿಸುವಲ್ಲಿ ನೀವು ಎಷ್ಟು ಮುಖ್ಯ ಪಾತ್ರ ವಹಿಸುತ್ತಿರೋ ಅಷ್ಟೇ ಪ್ರಮುಖವಾದ ಪಾತ್ರವನ್ನು ನಿಮ್ಮ ಶಾಲೆಗೆ ಬರುವ ವಿದ್ಯಾರ್ಥಿಗಳ ಜೀವನ ರೂಪಿಸಲು ಶ್ರಮ ವಹಿಸಬೇಕು ಎಂದರು.ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಮಕ್ಕಳಿಂದ ಫಲಿತಾಂಶ ಹೇಗೆ ಹೆಚ್ಚಿಸಬೇಕು ಎಂಬುದು ಶಿಕ್ಷಕರಿಗೆ ತಿಳಿದಿರುತ್ತದೆ. ಉಪವಿಭಾಗದ ಮಟ್ಟದಲ್ಲಿ ಶೇ 40 ಕ್ಕಿಂತ ಕಡಿಮೆ ಫಲಿತಾಂಶ ಹೊಂದಿರುವ ಶಾಲೆಗಳು ಹೇಗೆ ತಮ್ಮ ಫಲಿತಾಂಶವನ್ನು ವೃದ್ಧಿಸಬಹುದು ಎಂದು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ಭಾಷಾಭಿಮಾನ ಹಾಗೂ ಕನ್ನಡ ಮಾತನಾಡುವ ಜಿಲ್ಲೆಯಲ್ಲಿಯೇ 3187 ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಅನುತ್ತೀರ್ಣಗೊಂಡಿರುವುದು ವಿಷಾದನೀಯ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ದಂತಹ ವಿಷಯಗಳಿಗೆ ನೀಡುವ ಪ್ರಾಮುಖ್ಯತೆಯಷ್ಠೆ ಭಾಷಾ ವಿಷಯಗಳಿಗೂ ನೀಡುವಂತೆ ಸಲಹೆ ನೀಡಿದರು.ಶಿಕ್ಷಣ ಇಲಾಖೆ ನಮ್ಮ ಇಲಾಖೆ ಇದ್ದಂತೆ, ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಿದರೆ ಜಿಲ್ಲೆಯ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಖಂಡಿತವಾಗಿಯೂ ಹೆಚ್ಚಿಸಬಹುದು. ಅಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಿ ಈ ವರ್ಷ ಜಿಲ್ಲೆಯ ಫಲಿತಾಂಶವನ್ನು ಹೆಚ್ಚಿಸೋಣ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಮಾತನಾಡಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.100 ಫಲಿತಾಂಶ ಪಡೆದ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಡೀಸಿ ಮತ್ತು ಸಿಇಒ ಪ್ರಶಸ್ತಿ ಫಲಕವ ವಿತರಿಸಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹಾದೇವ, ಸೌಭಾಗ್ಯ, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ಸಿದ್ದರಾಜು ಸೇರಿದಂತೆ ಪ್ರೌಢಶಾಲೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.