ಕಾರ್ಕಳ: ಕಾರ್ಕಳ ಸರ್ಕಾರಿ ತಾಲೂಕು ಆಸ್ಪತ್ರೆಗೆ ಪ್ರಸೂತಿ ತಜ್ಞ ವೈದ್ಯರನ್ನು ನೇಮಿಸಿರುವುದನ್ನು ಜೈ ಭೀಮ್ ಯುವ ಸೇನೆ ಸ್ವಾಗತಿಸಿದ್ದು, ಈ ನೇಮಕಾತಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದೆ.
ಜೈ ಭೀಮ್ ಯುವ ಸೇನೆಯ ರಾಜ್ಯಾಧ್ಯಕ್ಷ ಅಶೋಕ್ ಕುಂಟಲ್ಪಾಡಿ ಮಾತನಾಡಿ, ಹಲವು ವರ್ಷಗಳಿಂದ ಬಡ ಜನರಿಗೆ ಆಧಾರವಾಗಿರುವ ಕಾರ್ಕಳ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರ ಕೊರತೆ ಇತ್ತು. ಈ ಕುರಿತು ಜೈ ಭೀಮ್ ಯುವ ಸೇನೆ ನಿರಂತರವಾಗಿ ಹೋರಾಟ ನಡೆಸಿ, ಸರ್ಕಾರದ ಗಮನ ಸೆಳೆದಿತ್ತು. ಕಳೆದ ತಿಂಗಳು ನಾಗಲಕ್ಷ್ಮಿ ಚೌಧರಿ ಅವರು ಕಾರ್ಕಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಸ್ಯೆಯನ್ನು ಅವರ ಗಮನಕ್ಕೆ ತರಲಾಗಿತ್ತು. ಅಲ್ಲದೆ, ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಅವರ ಶಿಫಾರಸಿನ ಮೂಲಕವೂ ಪ್ರಸೂತಿ ತಜ್ಞರನ್ನು ನೇಮಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.ಆದರೆ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರ ಲಭ್ಯತೆ ಇನ್ನೂ ಸಮರ್ಪಕವಾಗಿಲ್ಲ. ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಯ ಸೇವೆಗಳು ಪೂರ್ಣ ಪ್ರಮಾಣದಲ್ಲಿ ದೊರಕಬೇಕು. ಯಾವುದೇ ಒತ್ತಡ ಅಥವಾ ಮೆಡಿಕಲ್ ಲಾಬಿಗಳ ಪ್ರಭಾವದಿಂದ ವೈದ್ಯರನ್ನು ವರ್ಗಾವಣೆ ಮಾಡುವ ಪ್ರಯತ್ನ ನಡೆದರೆ ಅದರ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವ ಬಗ್ಗೆ ಗಮನ ಸೆಳೆದ ಅವರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ವಿವಿಧ ಯೋಜನೆಗಳ ಅನುದಾನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಸಂಘಟನೆ ಕೈಗೊಳ್ಳಲಿದೆ. ವಿಶೇಷವಾಗಿ ಎಸ್‌ಸಿ ಸಮುದಾಯಕ್ಕೆ ಮೀಸಲಾದ ಅನುದಾನಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲಾಗುವುದು ಎಂದರು.ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ಕೃಷ್ಣ ಅಜೆಕಾರು, ಉಡುಪಿ ಜಿಲ್ಲಾ ಅಧ್ಯಕ್ಷ ರಮೇಶ್ ಬಿ., ಸಂಘಟನಾ ಕಾರ್ಯದರ್ಶಿ ಗಣೇಶ್ ಹಿರಿಯಡ್ಕ, ಹೆಬ್ರಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಅಜೆಕಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.