ಸಾರಾಂಶ
ಹುಬ್ಬಳ್ಳಿ:
ಪಶು ಸಂಗೋಪನೆ ಇಲಾಖೆಗೆ ಈಗಾಗಲೇ 400 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 400 ವೈದ್ಯರ ನೇಮಕಕ್ಕೆ ಕೆಪಿಎಸ್ಸಿ ಅವರಿಗೆ ನೀಡಲಾಗಿದೆ. ಅವರು ಪರಿಶೀಲನೆ ನಡೆಸಿ ಏಪ್ರಿಲ್ ವೇಳೆಗೆ ನೇಮಕ ಪೂರ್ಣಗೊಳಿಸುವರು ಎಂದು ಪಶು ಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಳಿದಂತೆ 200 ಇನ್‌ಸ್ಪೆಕ್ಟರ್, 700 ಡಿ ದರ್ಜೆ ನೌಕರರ ನೇಮಕಾತಿ ಪ್ರಕ್ರಿಯೆಯನ್ನು ಏಪ್ರಿಲ್ ವೇಳೆಗೆ ಪೂರ್ಣಗೊಳಿಸುವುದಾಗಿ ತಿಳಿಸಿದರು.ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕಾಗಿ ಹಾವೇರಿಯಲ್ಲಿ ₹ 15 ಕೋಟಿ ವೆಚ್ಚದ ಹೈಟೆಕ್ ಮಾರುಕಟ್ಟೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಸೆಪ್ಟೆಂಬರ್ ವೇಳೆಗೆ ಉದ್ಘಾಟನೆಗೆ ಸಜ್ಜಾಗಲಿದೆ. ರೇಷ್ಮೆ ಬೆಳೆಯಲು ಮುಂದೆ ಬರುವ ರೈತರಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಲಾಗುವುದು. ತರಬೇತಿ ಸಹ ನೀಡಲಾಗುವುದು. ಬೆಳೆಗಾರರು ಇದರ ಪ್ರಯೋಜನ ಪಡೆಯುವಂತೆ ಕೋರಿದರು.ಸೂಕ್ತ ಕ್ರಮಕ್ಕೆ ಒತ್ತಾಯ:ಶಿವಮೊಗ್ಗ ಜಿಲ್ಲೆಯ ಸೀಗೆಬಾಗಿ ಬಳಿ ಅಕ್ರಮ ಮರಳುಗಾರಿಕೆ ತಡೆಯಲು ಹೋಗಿದ್ದ ಮಹಿಳಾ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿರುವುದು ಖಂಡನಾರ್ಹ. ಈ ರೀತಿ ಮಾಡಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಚಿವರು ಒತ್ತಾಯಿಸಿದರು.
ಮೈಸೂರಿನ ಉದಯಗಿರಿ ಠಾಣೆಗೆ ಕಲ್ಲೆಸೆದು ಗಲಾಟೆ ಮಾಡಿದ ಪ್ರಕರಣ ಖಂಡನೀಯ. ಯಾವ ಸಮಾಜದವರಾದರೂ ಕಾನೂನು ಕೈಗೆ ತೆಗೆದುಕೊಳ್ಳುವುದು ತಪ್ಪು. ಆದರೆ, ಬಿಜೆಪಿಯವರು ಸಣ್ಣ ವಿಷಯವನ್ನು ದೊಡ್ಡದು ಮಾಡುವುದರಲ್ಲಿ ನಿಸ್ಸೀಮರು ಎಂದರು.ಜಾನುವಾರು ಗಣತಿ ಕಾರ್ಯ ಪೂರ್ಣಗೊಳಿಸಿ:
ರಾಜ್ಯಾದ್ಯಂತ ಈಗಾಗಲೇ ಜಾನುವಾರು ಗಣತಿ ಕಾರ್ಯ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಗಣತಿ ಕಾರ್ಯ ಪೂರ್ಣಗೊಳಿಸುವಂತೆ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು. ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಬುಧವಾರ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಜನವರಿಯಿಂದ ಜಾನುವಾರು ಗಣತಿ ಆರಂಭಿಸಲಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಶೇ. 70ರಷ್ಟು ಗಣತಿ ಕಾರ್ಯ ಪೂರ್ಣಗೊಂಡಿದೆ. ಫೆ. 28ರೊಳಗೆ ಉಳಿದ ಗಣತಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಕೆಲವೆಡೆ ದಾಖಲೀಕರಣದ ಸರ್ವರ್ ಸಮಸ್ಯೆ, ತಾಂತ್ರಿಕ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಿರುವ ತಾಂತ್ರಿಕ ಸಮಸ್ಯೆ ಸರಿಪಡಿಸಿಕೊಂಡು ಕಾಲಮಿತಿಯಲ್ಲಿಯೇ ಗಣತಿ ಕಾರ್ಯ ಪೂರ್ಣಗೊಳಿಸುವಂತೆ ತಿಳಿಸಿದರು.
ಈ ವೇಳೆ ಮಾತನಾಡಿದ ಅಧಿಕಾರಿಗಳು, ಧಾರವಾಡ, ಗದಗ, ಹಾವೇರಿ ಈ ಮೂರು ಜಿಲ್ಲೆಗಳಲ್ಲಿ ಎಲ್ಲಿಯೂ ಜಾನುವಾರು ಕಾಯಿಲೆಗಳು ಕಂಡು ಬಂದಿಲ್ಲ. ಕಾಲಕಾಲಕ್ಕೆ ಲಸಿಕೆ ನೀಡುವುದು, ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.ಜಾನುವಾರು ಗಣತಿಯಲ್ಲಿ ಗದಗ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈಗಾಗಲೇ ಶೇ. 95ರಷ್ಟು ಕಾರ್ಯವಾಗಿದೆ. ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು, ಸ್ಥಳೀಯರಿಗೆ ಆದ್ಯತೆ ನೀಡುವಂತೆ ಸಚಿವರ ಬಳಿ ಮನವಿ ಮಾಡಿದರು.ಈ ವೇಳೆ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.