ಮಂಡ್ಯ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ನಿಗಧಿತ ವೇಳಾಪಟ್ಟಿಯಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವುದು. ಅರ್ಹ ಫಲಾನುಭವಿಗಳಿಗೆ ತೂಕದಲ್ಲಿ ವ್ಯತ್ಯಾಸವಾಗದಂತೆ ಪಡಿತರ ವಿತರಿಸಬೇಕು. ಇಲ್ಲದಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ನ್ಯಾಯಬೆಲೆ ಅಂಗಡಿಗಳ ಅವಶ್ಯಕತೆ ಇರುವ ಪ್ರದೇಶಗಳನ್ನು ಗುರುತಿಸಿ, ಸರ್ಕಾರದ ಮಾರ್ಗಸೂಚಿಗಳ ಅನುಸಾರ ಜಿಲ್ಲೆಯಲ್ಲಿ ೨೪ ಹೊಸ ನ್ಯಾಯಬೆಲೆ ಅಂಗಡಿ ತೆರೆಯುವ ಕುರಿತು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಕಟಣೆ ಹೊರಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಸುಗಮವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಹೊಸ ನ್ಯಾಯಬೆಲೆ ಅಂಗಡಿಗಳ ಸ್ಥಾಪನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪ್ರಕಟಣೆ ಹೊರಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ನಿಗಧಿತ ವೇಳಾಪಟ್ಟಿಯಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸುವುದು. ಅರ್ಹ ಫಲಾನುಭವಿಗಳಿಗೆ ತೂಕದಲ್ಲಿ ವ್ಯತ್ಯಾಸವಾಗದಂತೆ ಪಡಿತರ ವಿತರಿಸಬೇಕು. ಇಲ್ಲದಿದ್ದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಸಮರ್ಪಕ ದಾಸ್ತಾನು ಕಾಪಾಡಬೇಕು. ಪಡಿತರ ವಿತರಣೆಯಲ್ಲಿ ವಿಳಂಬ ಅಥವಾ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಅವುಗಳನ್ನು ತಕ್ಷಣವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರದ ಅನ್ನಭಾಗ್ಯ ಸೇರಿದಂತೆ ವಿವಿಧ ಆಹಾರ ಭದ್ರತಾ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಸಾರ್ವಜನಿಕರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ, ತೂಕದಲ್ಲಿ ವ್ಯತ್ಯಾಸ, ಆಹಾರ ಧಾನ್ಯಗಳ ಕೊರತೆ, ಅಂಗಡಿಗಳ ಕಾರ್ಯನಿರ್ವಹಣೆ ಅಥವಾ ಆಹಾರ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರುಗಳು ಹಾಗೂ ಸಮಸ್ಯೆಗಳಿದ್ದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯವಾಣಿ ಸಂಖ್ಯೆ ೧೦೬೭ ಅನ್ನು ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಧನುಷ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಪ್ರತೀಕ್ ಹೆಗ್ಡೆ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.