ಕನ್ನಡಪ್ರಭ ವಾರ್ತೆ ಮಂಡ್ಯ
ದೇವರಾಜ ಅರಸು ಅವರ ಪ್ರಮುಖ ಸಾಧನೆಗಳಲ್ಲಿ ಭೂ ಸುಧಾರಣಾ ಕಾಯಿದೆಗೆ ವಿಶೇಷ ಸ್ಥಾನವಿದೆ. ಉಳುವವನೇ ಭೂಮಿಯ ಒಡೆಯ ಎಂಬ ತತ್ವವನ್ನು ಜಾರಿಗೊಳಿಸುವ ಮೂಲಕ ಭೂಮಿಯಲ್ಲಿ ದುಡಿಯುತ್ತಿದ್ದ ರೈತರನ್ನೇ ಭೂ ಮಾಲೀಕರನ್ನಾಗಿ ಮಾಡಿ ಐತಿಹಾಸಿಕ ಬದಲಾವಣೆಗೆ ಕಾರಣರಾದರು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಶೋಷಿತರು, ದೀನ-ದಲಿತರು ಹಾಗೂ ಆರ್ಥಿಕವಾಗಿ ಹಿಂದುಳಿದವರು ಸಮಾಜದ ಮುಖ್ಯವಾಹಿನಿಗೆ ಬರಲು ಈ ಕಾಯಿದೆ ಮಹತ್ವದ ಬದಲಾವಣೆಗೆ ಕಾರಣವಾಯಿತು ಎಂದರು.
ದೇವರಾಜ ಅರಸು ಅವರು ತಮ್ಮ ವೈಯಕ್ತಿಕ ಬದುಕಿಗಾಗಿ ಬದುಕಿದವರಲ್ಲ. ಜನರಿಗಾಗಿ ಬದುಕಿದ ಮಹಾನ್ ನಾಯಕರು. ಅವರ ಆದರ್ಶ, ಚಿಂತನೆ ಹಾಗೂ ಜನಪರ ಕಾರ್ಯಗಳನ್ನು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಗ್ರಾಮೀಣ ಪ್ರದೇಶದ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೂರದೃಷ್ಟಿಯಿಂದ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಸಾಧನೆ ಮಾಡುವುದೇ ದೇವರಾಜ ಅರಸು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.
ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಮಾಧ್ಯಮ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶೈಲೇಶ್ ರಾಜೇ ಅರಸ್ ಮಾತನಾಡಿ, ಅರಸು ಅವರ ಆಡಳಿತಾವಯನ್ನು ಕರ್ನಾಟಕದ ಸಾಮಾಜಿಕ ಕ್ರಾಂತಿಯ ಪ್ರಮುಖ ಘಟ್ಟವೆಂದು ಗುರುತಿಸಬಹುದು. ಒಡೆಯರ್ ಅವರ ಕಾಲದಲ್ಲಿ ಆರಂಭವಾದ ಸಾಮಾಜಿಕ ಸುಧಾರಣೆಯ ಪರಂಪರೆಯನ್ನು ಸ್ವಾತಂತ್ರ್ಯಾನಂತರ ಅರಸು ಅವರು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿದರು. ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗೆ ಒತ್ತು ನೀಡುವ ಮೂಲಕ ಸಾಮಾಜಿಕ ನ್ಯಾಯದ ಆಶಯವನ್ನು ಬಲಪಡಿಸಿದರು ಎಂದರು.
ಮೆರವಣಿಗೆ ಚಾಲನೆ:
ಕಾರ್ಯಕ್ರಮಕ್ಕೂ ಮುನ್ನ ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಕೆ.ಆರ್.ನಂದಿನಿ ಅವರು ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಅಲಂಕೃತ ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಾಗೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಲ್.ಸಂದೇಶ್, ಮುಖಂಡರಾದ ನಟರಾಜ್, ಅಮ್ಜದ್ ಪಾಷಾ, ಅಂಜನಪ್ಪ ಸೇರಿದಂತೆ ಅಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.